Ganga Kalyan: ಗಂಗಾ ಕಲ್ಯಾಣ-ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ- ಕೋಟಾ ಶ್ರೀನಿವಾಸ ಪೂಜಾರಿ

ವಿಜಯಪುರ: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ. ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ನಾನಾ ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿ ಪಾರದರ್ಷಕವಾಗಿ ಆಯ್ಕೆ ಮಾಡಬೇಕು.  ಮೊರಾರ್ಜಿ ವಸತಿ ಶಾಲೆಗಳಲ್ಲಿ ನಡೆಯುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ, ಕರಾಟೆ, ಸ್ಪೋಕನ್ ಇಂಗ್ಲೀಷ್, ವ್ಯಕ್ತಿತ್ವ ವಿಕಸನ ತರಬೇತಿಗಳು ಹಾಗೂ ಜಿ. ಪಂ. ವತಿಯಿಂದ ನಡೆಯುತ್ತಿರುವ ಮಿಷನ್ ವಿದ್ಯಾಪುರ ಅಚ್ಚುಕಟ್ಟಾಗಿ ನಡೆಯುತ್ತಿರುವುದಕ್ಕೆ ಶ್ಲಾಘಿಸಿದ ಸಚಿವರು, ಜಿಲ್ಲೆಯ ಎಲ್ಲ ಹಾಸ್ಟೇಲ್‍ಗಳಲ್ಲಿ ಈ ಕಾರ್ಯಕ್ರಮಗಳ ಆಯೋಜನೆಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ತಿಕೋಟಾದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕೇವಲ 4 ಬಾಡಿಗೆ ಕಟ್ಟಡಗಳನ್ನು ಹೊಂದಿದ್ದು, ಉಳಿದ ಹಾಸ್ಟೆಲ್‍ಗಳು ಸಹ ಸ್ವಂತ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುವಂತೆ ಸ್ವಂತ ಕಟ್ಟಡಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು.  ಇಲಾಖೆಯ ಹಾಸ್ಟೆಲ್ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಎಂಜಿನಯರುಗಳಿಗೆ ಸಚಿವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಾನಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಚಾರ್ಯರು ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಈ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಬಗೆ ಹರಿಸಲಾಗುವುದು.  ಇಲಾಖೆಯ ಅಡುಗೆ ಸಿಬ್ಬಂದಿ ಸ್ವಚ್ಛತಾಗಾರರು ಸೇರಿದಂತೆ ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಕುರಿತು ಉನ್ನತ ಮಟ್ಟದಲ್ಲಿ ಚರ್ಚಿಸಿ ವೇತನಕ್ಕೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು.  ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ದಿ ಇಲಾಖೆಯಲ್ಲಿನ ಅಧಿಕಾರಿ, ನೌಕರರ ಪದೋನ್ನತಿ, ವರ್ಗಾವಣೆ  ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು ಎಂದು ಅವರು ಹೇಳಿದರು.

ತಿಕೊಟಾ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು, ವಸತಿ ಶಾಲೆಯಲ್ಲಿನ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.  ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿರು.

ವಿದ್ಯಾರ್ಥಿಗಳ ಕುಂದು, ಕೊರತೆಗಳನ್ನು ಆಲಿಸಿ, ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಪ್ರಾಚಾರ್ಯರು ತಮ್ಮ ಹಂತದಲ್ಲಿಯೇ ಬಗೆಹರಿಸಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ, ಜಿ. ಪಂ. ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಣ್ಣ ಆಶಾಪುರ, ಮೊರಾರ್ಜಿ ವಸತಿ ಶಾಲೆಗಳ ಸಮನ್ವಯ ಅಧಿಕಾರಿ ಸಜ್ಜನ, ಸಮಾಜ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಪುಂಡಲಿಕ ಮನೋಹರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌