ಬೆಂಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮತ್ತು 2021ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್.ಸಿದ್ಧರಾಮಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಎಸ್. ಲೋಣಿ ಕಾಂಗ್ರೇಸ್ಗೆ ಸೇರ್ಪಡೆಯಾದರು. ಡಿ.ಕೆ.ಶಿವಕುಮಾರ ಮತ್ತು ಎಸ್. ಸಿದ್ಧರಾಮಯ್ಯ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕೂಡ ಉಪಸ್ಥಿತರಿದ್ದರು.
ಮಲ್ಲಿಕಾರ್ಜುನ ಲೋಣಿ ಅವರು 1995ರಲ್ಲಿ ಅಖಂಡ ವಿಜಯಪುರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದರು. 2021ರಲ್ಲಿ ನಡೆದ ವಿಧಾನ ಪರಿಷತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಕರ್ನಾಟಕ ರಾಜ್ಯ ಗಾಣಿಗ(ತೇಲಿ ಸಮಾಜ) ಸಂಘ ಹುಬ್ಬಳ್ಳಿಯ ಕಾರ್ಯಾಧ್ಯಕ್ಷರಾಗಿರುವ ಇವರು ಈಗ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ ಗಾಂಧಿ, ಡಿ. ಕೆ. ಶಿವಕುಮಾರ, ಸಿದ್ಧರಾಮಯ್ಯ, ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.