ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯ ಅನುದಾನ ಮರಳಿ ಹೋಗದಂತೆ ನೋಡಿಕೊಂಡು ಸಮರ್ಪಕವಾಗಿ ಅನುದಾನ ಬಳಸಿ ಅರ್ಹ ಫಲಾನುಭವಿಗೆ ಯೋಜನೆಯ ಲಾಭ ದೊರಕಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ವರ್ಷದ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಅಕ್ಟೊಬರ್ ತಿಂಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ನಾನಾ ಇಲಾಖೆಗಳಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯ ಅನುಷ್ಠಾನಗೊಳ್ಳುತ್ತಿರುವ ನಾನಾ ಯೋಜನೆಗಳ ಅನುದಾನ ನಿಗದಿತ ಉದ್ದೇಶಕ್ಕೆ ಸಂಪೂರ್ಣವಾದ ಅನುದಾನ ಬಳಸಬೇಕು. ಅನುದಾನ ಬಳಕೆಯಾಗದಿದ್ದರೆ ಪ್ರಕರಣ ದಾಖಲಿಸುವ ಅವಕಾಶವಿರುವುದರಿಂದ ಯಾವುದೇ ಕಾರಣಕ್ಕೂ ಸಮರ್ಪಕವಾಗಿ ಅನುದಾನವನ್ನು ಬಳಕೆ ಮಾಡಿ, ಅರ್ಹ ಫಲಾನುಭವಿಗೆ ಲಾಭ ದೊರಕಿಸುವ ನಿಟ್ಟಿನಲ್ಲಿ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದರು.
ಮೀನುಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಯಡಿ 200 ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುಮೋದಿಸಲಾಗಿದೆ ಎಂದು ಸಭೆಗೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಪಂಚಾಯತ್ ಇಂಜಿನೀಯರಿಂಗ್ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಎಸ್‍ಸಿಪಿ ಟಿಎಎಸ್‍ಪಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಈ ಸಭೆಯಲ್ಲಿ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ, ಜಿ.ಪಂ.ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಶ ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.