ವಿಜಯಪುರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಆಯುಕ್ತೆ ಶಿಲ್ಪಾನಾಗ ಅವರು ವಿಜಯಪುರ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿ, 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಅನುಷ್ಠಾನಗೊಳ್ಳುತ್ತಿರುವ ಸರೋವರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ನೀರಿನ ಮೂಲಗಳ ಅಭಿವೃಧ್ದಿಗೊಳಿಸುವಿಕೆ, ನರೇಗಾ ತಂತ್ರಾಂಶದಲ್ಲಿ ಕಾಯಕ ಬಂಧು ನೋಂದಣಿಗೆ ಕ್ರಮ ವಹಿಸಬೇಕು. ನರೇಗಾ ಯೋಜನೆಯಡಿ ಹಿರಿಯ ನಾಗರಿಕರು, ಮಹಿಳೆಯರು, ವಿಶೇಷ ಚೇತನರಿಗೆ ಅದ್ಯತೆ ನೀಡಿ ಕೆಲಸ ಒದಗಿಸಬೇಕು. ಎಂದು ಆಯುಕ್ತರು ಸೂಚನೆ ನೀಡಿದರು.
ಮುಳವಾಡ ಗ್ರಾಮ ಪಂಚಾತಿ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆ ಸಹಯೋಗದಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ದ್ರಾಕ್ಷಿ ಬೆಳೆ ಹಾಗೂ ಪ್ರಗತಿ ಹಂತದಲ್ಲಿರುವ ಪೇರು ಸಸಿ ನಾಟಿ ಮಾಡಿರುವ ಸ್ಥಳವನ್ನು ಅವರು ಪರಿಶೀಲನೆ ನಡೆಸಿದರು.
ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಲ್ಪಾನಾಗ್, ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮರಣ ಹೊಂದಿದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಅವಲಂಬಿತರಿಗೆ ಆಶ್ವಾಸನೆ ನಿಧಿಯ ಚೆಕ್ಕನ್ನು ಹಸ್ತಾಂತರಿಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಜಿಲ್ಲಾ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ರಾಜ್ಯ ಆಯುಕ್ತಾಲಯದ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ, ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಕೊಲ್ಹಾರ ತಾಲೂಕಾ ಕಾರ್ಯ ನಿರ್ವಾಹಕ ಅಧಿಕಾರಿ ಫರೀದಾ ಪಠಾಣ, ಜಿ. ಪಂ. ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ವಿ. ಎಸ್. ಹಿರೇಮಠ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.