ವಿಜಯಪುರ: ವಿಜಯಪುರದಲ್ಲಿ ನಡೆಯುವ ಪತ್ರಕರ್ತರ 37ನೇ ರಾಜ್ಯ ಮಟ್ಟದ ಸಮ್ಮೇಳನ ಅತ್ಯಂತ ಅಚ್ಚುಕಟ್ಟಾಗಿ ನಡೆಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಪತ್ರಕರ್ತರಿಗೆ ಯಾವುದೇ ರೀತಿಯ ಅನಾನೂಕೂಲವಾಗದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ಒದಗಿಸಲಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ವಸತಿ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಊಟದ ವ್ಯವಸ್ಥೆ, ಆರೋಗ್ಯ, ಪೋಲಿಸ್ ರಕ್ಷಣೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಸೂಕ್ತ ವ್ಯವಸ್ಥೆ ಕಲ್ಪಿಸಿ, ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ತಿಳಿಸಿದರು.
ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರ ವಸತಿ ವ್ಯವಸ್ಥೆ ಕಲ್ಪಿಸಿ ಸಹಕರಿಸುವಂತೆ ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ ಅತಿಥಿ ಗೃಹಗಳು, ಸೇರಿದಂತೆ ಭಾರತ್ ಸ್ಕೌಟ್ಸ್ &ಗೈಡ್ಸ್, ವಿಶ್ವವಿದ್ಯಾಲಯದ ಅಧೀನದಲ್ಲಿರುವ ಅತಿಥಿ ಗೃಹಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಕೊಠಡಿಗಳನ್ನು ಕಾಯ್ದಿರಿಸಬೇಕು. ನಗರದ ರಂಗಮಂದಿರದಲ್ಲಿ ನಡೆಯುವ ಸಮ್ಮೇಳನದಲ್ಲಿ ಜನದಟ್ಟಣೆಯಾಗಲಿದೆ. ಇದರಿಂದ ದರಬಾರ ಆವರಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪತ್ರಕರ್ತರು ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ಅನುಕೂಲವಾಗುವಂತೆ ಬಸ್‍ಗಳ ವ್ಯವಸ್ಥೆ, ಸಮ್ಮೇಳನ ಕುರಿತು ವಿವಿಧೆಡೆ ಪ್ರಚಾರ ಫಲಕಗಳ ಅಳವಡಿಕೆ, 20-25 ಕ್ರೂಸರ್ ವಾಹನಗಳ ವ್ಯವಸ್ಥೆ , ಕೋವಿಡ್ ಮುಂಜಾಗ್ರತಾ ಕ್ರಮವಾಗಿ 5ಸಾವಿರ ಮಾಸ್ಕ್ ಹಾಗೂ ಸ್ಯಾನಿಟೈಸರ್, ವೈದ್ಯಕೀಯ ಸೇವೆಗಾಗಿ ಅಂಬ್ಯೂಲೆನ್ಸ್ ಸೇವೆ ಸೇರಿದಂತೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಕಾರ ನೀಡಿ, ಸಮ್ಮೇಳನದ ಯಶಸ್ವಿಗೆ ಕೈಜೋಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರು ಮಾತನಾಡಿ, ವಿಜಯಪುರದಲ್ಲಿ ನಡೆಯಲಿರುವ ಸಮ್ಮೇಳನಕ್ಕಾಗಿ ಈಗಾಗಲೇ 2400 ಪತ್ರಕರ್ತರ ರಾಜ್ಯದ ನಾನಾ ಕಡೆಗಳಿಂದ ಹೆಸರು ನೋಂದಾಯಿಸಿದ್ದಾರೆ. ಸುಮಾರು 3000 ಪತ್ರಕರ್ತರು ಸಮ್ಮೇಳನಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಆಗಮಿಸುವ ಎಲ್ಲ ಪತ್ರಕರ್ತರು ಸೇರಿದಂತೆ, ಗಣ್ಯಾತಿಗಣ್ಯರಿಗೆ ವಸತಿ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಊಟದ ವ್ಯವಸ್ಥೆ ಪೋಲಿಸ್ ವ್ಯವಸ್ಥೆ ಒದಗಿಸಿ ಸಮ್ಮೇಳನ ಯಶಸ್ವಿಗೆ ಸಹಕರಿಸುವಂತೆ ಕೋರಿದರು.
ಈಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ತಹಸೀಲ್ದಾರ ಸಿದ್ರಾಯ ಭೋಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಶ ಚವ್ಹಾಣ, ಎನ್ ಕೆ ಇ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ. ಎ. ಮುಲ್ಲಾ, ಮಹಾವೀರ ಬೋರಣ್ಣವರ, ಡಿವೈಎಸ್‍ಪಿ ಸಿದ್ದೇಶ್ವರ ಕೃಷ್ಣಾಪೂರ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಡಿ. ಬಿ. ವಡವಡಗಿ, ಮಹೇಶ ವಿ. ಶಟಗಾರ, ಪ್ರದೀಪ ಕುಲಕರ್ಣಿ, ಅಶೋಕ ಯಡಹಳ್ಳಿ ಮುಂತಾದವರು ಇತರರು ಉಪಸ್ಥಿತರಿದ್ದರು.