ಮಾ. 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ- ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ

ವಿಜಯಪುರ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲಾಗುವುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಹೇಳಿದ್ದಾರೆ. 

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 21ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾ. 1 ರಿಂದ ರಾಜ್ಯದ ಎಲ್ಲ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.  8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಾ. 1ರಿಂದ ನಡೆಯಲಿರುವ ಅನಿರ್ಧಿಷ್ಠಾವಧಿ ಮುಷ್ಕರದ ಭಿತ್ತಿಪತ್ರಗಳನ್ನು ಸರಕಾರಿ ನೌಕರರು ಪ್ರದರ್ಶಿಸಿದರು

ರಾಜ್ಯದ 2023-24ನೇ ಆರ್ಥಿಕ ವರ್ಷದ ಬಜೆಟ್ ನಲ್ಲಿ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಸೆ ಮೂಡಿಸಿದೆ.  ಆದ್ದರಿಂದ ನೌಕರರಿಗೆ 01.07.2022 ರಿಂದ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಬೇಕಾಗಿತ್ತು.  ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗಾಗಿ ಸರಕಾರ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದೆ.  ಆಯೋಗದ ಮುಂದೆ ಸಂಘವು ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು.  ರಾಜ್ಯ ಸರಕಾರದ ಅಧಿಕಾರಿ, ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದೆ.   ಎಲ್ಲ ಸರಕಾರಿ ನೌಕರ ಬಾಂಧವರು ಕರ್ತವ್ಯಕ್ಕೆ ಗೈರ ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸುವುದರೊಂದಿಗೆ ಯಶಸ್ವಿಗೊಳಿಸಲು ಸುರೇಶ ಶೇಡಶ್ಯಾಳ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಖಜಾಂಚಿ ಜುಬೇರ ಕೆರೂರ, ಕಾರ್ಯದರ್ಶಿ ರಾಜಶೇಖರ ದೈವಾಡಿ, ವಿಶ್ವನಾಥ ಬೆಳ್ಳೆನವರ, ಗಂಗಾಧರ ಜೇವೂರ, ವಿಜಯಕುರ ಹತ್ತಿ, ಶಿವರಾಜ ಬಿರಾದಾರ, ಪ್ರಕಾಶ ಗೊಂಗಡಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌