ಪೌರಕಾರ್ಮಿಕರ ಕುಂದು, ಕೊರತೆಗಳ ಪರಿಹಾರಕ್ಕೆ ಆದ್ಯತೆ ಮೇಲೆ ಕ್ರಮ- ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಕೋಟೆ

ವಿಜಯಪುರ: ರಾಜ್ಯದಲ್ಲಿ ಸುಮಾರು 7 ಸಾವಿರ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 3 ಸಾವಿರ ಜನರಿಗೆ ಪುನವಸತಿ ಕಲ್ಪಿಸಲಾಗಿದೆ 4 ಸಾವಿರ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳಿಗೆ ಪುನರ್ ವಸತಿ ಕಲ್ಪಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪ್ರತಿ ಜಿಲ್ಲೆಗಳಿಗೆ ಭೇಟಿ ನೀಡಿ, ಪೌರ ಕಾರ್ಮಿಕರ ಕುಂದು-ಕೊರತೆಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಯೋಗ ಕ್ರಮ ಕೈಗೊಳ್ಳಲಾಗುತ್ತಿದೆ. ಸಫಾಯಿ ಕರ್ಮಚಾರಿಗಳ ಹಿತರಕ್ಷಣೆಗಾಗಿ,ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ., ತತ್ಸಮಾನ ಹಾಗೂ ವಿವಿಧ ಪದವಿಗಳಲ್ಲಿ  ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಪೌರಕಾರ್ಮಿಕರಿಗೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಶಿಕ್ಷಣಕ್ಕೆ  ಆಯೋಗದಿಂದ ಪ್ರೇರೇಪಿಸಲಾಗುತ್ತಿದೆ ಎಂದು ಹೇಳಿದರು.

ಪೌರ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಶಿಕ್ಷಣ, ಆರೋಗ್ಯ, ತರಬೇತಿ, ಕೌಶಲ್ಯಾಭಿವೃದ್ದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ12 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಘೋಷಿಸಲಾಗಿದ್ದು, ಈಗಾಗಲೇ ರಾಜ್ಯದಲ್ಲಿ ನೇರ ಪಾವತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ಜನ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು.

ಪೌರ ಕಾರ್ಮಿಕರಿಗೆ ನಿವೇಶನ ಒದಗಿಸಲು ಕಾನೂನು ರಚನೆ ಮಾಡಲು ಚಿಂತನೆ ನಡೆಸಲಾಗಿದೆ. ಸುಸಜ್ಜಿತ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಓರಿಸ್ಸಾ ರಾಜ್ಯಕ್ಕೆ ಭೇಟಿ ನೀಡಿ,ಅಲ್ಲಿನ ‘ಗರಿಮಾ’ಎಂಬ ವಿಶ್ರಾಂತಿ ಗೃಹದ ಮಾದರಿಯಲ್ಲಿ ವಿನ್ಯಾಸವನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಏಕರೂಪ ಸಮವಸ್ತ್ರವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಸೂಚಿಸಲಾಗಿದೆ. ಪೌರಕಾರ್ಮಿಕರನ್ನು ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಸಿಂಗಪೂರಕ್ಕೆ ಕಳುಹಿಸಿ ಅಲ್ಲಿನ ಸ್ವಚ್ಛತೆ ಕುರಿತು ಪೌರಕಾರ್ಮಿಕರಲ್ಲಿ ಅರಿವು ಮೂಡಿಸಿ, ಆ ಪದ್ಧತಿಯನ್ನು ಸ್ಥಳೀಯವಾಗಿ ಅಳವಡಿಸಿಕೊಳ್ಳುವ ಕುರಿತಂತೆ ಈಗಾಗಲೇ ಸರ್ಕಾರದೊಂದಿಗೆ ಚರ್ಚಿಸಲಾಗಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಜಿಲ್ಲೆಯ 10 ಜನ ಪೌರಕಾರ್ಮಿಕರನ್ನು ಸಿಂಗಾಪುರ ಅಧ್ಯಯನ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ್, ಡ್ರೈವರ್, ಕ್ಲಿನರ್ ಅವರನ್ನು ನೇರ ಪಾವತಿಗೆ ಒಳಪಡಿಸಲು ಕ್ರಮ ವಹಿಸಲಾಗುತ್ತಿದೆ.ಪೌರ ಕಾರ್ಮಿಕರು ವಿವಿಧ ಎಲ್ಲ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಪೌರ ಕಾರ್ಮಿಕರ ಹಿತರಕ್ಷಣೆಗಾಗಿ ಆಯೋಗದಿಂದ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಆಯೋಗದ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ, ಎಂ.ಎಸ್.ಕಾಯ್ದೆ ರಾಜ್ಯ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಗೀತಾ ವಾಡೇಕರ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌