ವಿಜಯಪುರ: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮಹಿಳೆಯರ ಕ್ರಿಕೆಟ್ ಮತ್ತು ಚೆಸ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಈ ಪಂದ್ಯಾವಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮಕ್ಕಳು ಕೇವಲ ಪಠ್ಯಗಳಿಗೆ ಸೀಮಿತರಾಗದೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಕ್ರೀಡಾ ಮನೋಭಾವನೆಯನ್ನೂ ಅಳವಡಿಸಿಕೊಳ್ಳಬೇಕು. ಅಲ್ಲದೇ, ಕ್ರೀಡೆಯಲ್ಲಿ ಪಾಲ್ಗೋಂಡು ಜಿಲ್ಲಾ ಮತ್ತು ರಾಜ್ಯ ಮಟ್ಟಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.
ಈ ಕ್ರೀಡಾಕೂಟದಲ್ಲಿ ನಾನಾ ತಾಲೂಕುಗಳ 19 ವರ್ಷದೊಳಗಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಭಾಗವಹಿಸಿ, ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ ಭೀಮಪ್ಪ ಲಾಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಜಿ. ಪಂ. ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಮುಂತಾದವರು ಉಪಸ್ಥಿತರಿದ್ದರು.