ಮಾ. 31ರಿಂದ ಏ.15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ- ಪಾರದರ್ಶಕ ಹಾಗೂ ಸುಸೂತ್ರ ಪರೀಕ್ಷೆ ನಡೆಸಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 147 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಯಾವುದೇ ರೀತಿಯ ಅನಾನೂಕೂಲವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮಹತ್ವದ ಘಟ್ಟವಾಗಿದೆ. ಅವರ ಜೀವನ ಅಭ್ಯುದಯ, ಏಳಿಗೆಗೆ ಹೆಜ್ಜೆಯಾಗಿದೆ. ನಕಲುಮುಕ್ತವಾಗಿ ಪರೀಕ್ಷೆಗಳನ್ನು ನಡೆಸಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಈ ಪರೀಕ್ಷೆಗಳು ಅತ್ಯಂತ ಮಹತ್ವವಾಗಿರುವುದರಿಂದ ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡಬಾರದು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳನ್ನು ಪ್ರತ್ಯೇಕವಾಗಿ ವ್ಯವಸ್ಥಿತವಾಗಿ ವಿತರಣೆಯಾಗಬೇಕು.  ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿಸಿದ ಸಿಬ್ಬಂದಿಗಳು ಮಾತ್ರ ಪರೀಕ್ಷಾ ಕೇಂದ್ರದಲ್ಲಿ  ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಅಧೀಕ್ಷಕರು ಪರೀಕ್ಷೆಗೆ ಅಚ್ಚುಕಟ್ಟಾಗಿ ನಡೆಯುವ ಬಗ್ಗೆ, ಪ್ರಶ್ನೆ ಪತ್ರಿಕೆ ವಿತರಣೆ, ಉತ್ತರ ಪತ್ರಿಕೆ ಅಚ್ಚುಕಟ್ಟಾಗಿ ಸಂಗ್ರಹ ಮಾಡುವುದರ ಸೂಕ್ತ ತಂಡಕ್ಕೆ ಒಪ್ಪಿಸಬೇಕು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ನೀಡಲಾದ ಸೂಚನೆ-ನಿರ್ದೇಶನಗಳನ್ನು ಪಾಲಿಸಬೇಕು ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಡಿಸಿ ಡಾ. ದಾನಮ್ಮನವರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮ ವಾತಾವರಣ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಕೊಠಡಿಯಲ್ಲಿನ ಶುಚಿತ್ವ ಹಾಗೂ ವಿದ್ಯುತ್ ವ್ಯವಸ್ಥೆ ಸರಿಪಡಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಪರೀಕ್ಷಾ ಕೇಂದ್ರದ ನಿಯೋಜಿತ ಅಧಿಕಾರಿ ಸಿಬ್ಬಂದಿಗಳನ್ನು ಹೊಣೆಗಾರರನ್ನಾಗಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಅರ್ಧಗಂಟೆ ಮೊದಲು ಹಾಜರಾಗಬೇಕು. ಪರೀಕ್ಷೆ ಆರಂಭವಾದ ನಂತರ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿರುವ ಅವರು, ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಪ್ರತಿ ವಿದ್ಯಾರ್ಥಿಗೆ ಹಾಲ್‍ಟಿಕೆಟ್ ಕಡ್ಡಾಯವಾಗಿ ದೊರಕಿಸುವ ಕಾರ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಡಬೇಕು. ಯಾವುದೇ ರೀತಿಯಲ್ಲಿ ವಿದ್ಯಾರ್ಥಿಗಳೀಗೆ ಹಾಲ್‍ಟಿಕೆಟ್‍ಗಾಗಿ ತೊಂದರೆಪಡುವಂತಹ ಪ್ರಕರಣಗಳು ಕಂಡು ಬಂದಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅದರಂತೆ ಪರೀಕ್ಷಾ ಕೇಂದ್ರದಲ್ಲಿ ಆಯಾ ಕೇಂದ್ರ ಅಧೀಕ್ಷಕರು, ನಕಲು ನಡೆಯದಂತೆ ಎಚ್ಚರಿಕೆ ವಹಿಸಬೇಕು.

ಪರೀಕ್ಷಾ ಕೇಂದ್ರದ ಸುತ್ತಲೂ 144 ಕಲಂರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣಕ್ಕೆ ಅವಕಾಶವಿರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿ ನಿಯೋಜಿಸಿದ ಸಿಬ್ಬಂದಿಗಳಿಗೆ ಮತ್ತು ಪರೀಕ್ಷಾರ್ಥಿಗಳಿಗೆ ಮಾತ್ರ  ಪ್ರವೇಶಾವಕಾಶವಿದೆ. ಅನಾವಶ್ಯಕವಾಗಿ ವಿದ್ಯಾರ್ಥಿಗಳಿಗೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ತೊಡಕು ಉಂಟು ಮಾಡುವವರ ವಿರುದ್ಧ ಕಟ್ಟುನಿಟ್ಟಿನ  ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ಪರೀಕ್ಷಾ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು, ಉಪ ಅಧೀಕ್ಷಕರು, ವೀಕ್ಷಕರು, ಜಾಗೃತ ದಳದ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಕಲು ಮುಕ್ತ ಪರೀಕ್ಷೆಗಾಗಿ ಸಂಚಾರಿ ಜಾಗೃತ ದಳಗಳನ್ನು ರಚಿಸಲಾಗಿದ್ದು, ಜಿಲ್ಲಾ ಹಾಗೂ ತಾಲೂಕಾ ಹಂತದಲ್ಲಿ ಜಾಗೃತ ತಂಡಗಳು ಅತಿ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರು ಬಾರದಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ, ಬೇಜಾವಾಬ್ದಾರಿ ವಹಿಸದೇ ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಯು.ಎಸ್.ಶಿರಹಟ್ಟಿಮಠ ಅವರು, ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಈ ಬಾರಿ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 7257, ಬಸವನಬಾಗೇವಾಡಿ 5541, ವಿಜಯಪುರ ಗ್ರಾಮೀಣ 7297, ಮುದ್ದೇಬಿಹಾಳ 6251, ಚಡಚಣ 3054, ಇಂಡಿ 4658 ಹಾಗೂ ವಿಜಯಪುರ ನಗರ 6388 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ  ಒಟ್ಟು 40446 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಸಿಂದಗಿ ತಾಲೂಕಿನಲ್ಲಿ 27, ಬಸವನಬಾಗೇವಾಡಿ 21, ವಿಜಯಪುರ ಗ್ರಾಮಿಣ 22, ಮುದ್ದೇಬಿಹಾಳ 20, ಚಡಚಣ 12, ಇಂಡಿ 18 ಹಾಗೂ ವಿಜಯಪುರ ನಗರದಲ್ಲಿ 27 ಸೇರಿದಂತೆ    ಒಟ್ಟು 147 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಖಜಾನೆ ಇಲಾಖೆ ಉಪನಿರ್ದೇಶಕ ರಾಜಗೋಪಾಲ, ಎಸ್.ಎಸ್.ಎಲ್.ಸಿ. ಪರೀಕ್ಷೆ ನೋಡಲ್ ಅಧಿಕಾರಿಗಳಾದ ಮಂಜುನಾಥ್ ಗುಳೇದಗುಡ್ಡ ನಾನಾ ತಾಲೂಕಾ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌