ವಿಜಯಪುರ: ಜಿಲ್ಲಾದ್ಯಂತ 147 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಶುಕ್ರವಾರ ನಗರದ ಟಿಟಿಐ ಆವರಣದಲ್ಲಿರುವ ಸರ್ಕಾರಿ ಉರ್ದು ಪ್ರೌಢ ಶಾಲೆ ಹಾಗೂ ಬಾಗಲಕೋಟೆ ರಸ್ತೆಯಲ್ಲಿರುವ ಪಿಡಿಜೆ ಪ್ರೌಢ ಶಾಲೆ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಯಾವುದೇ ಭಯವಿಲ್ಲದೇ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ- ಸಿಬ್ಬಂದಿ ಮಾತ್ರ ಪರೀಕ್ಷಾ ಕೇಂದ್ರದಲ್ಲಿರಬೇಕು. ಬೇರೆ ಯಾರನ್ನು ಪರೀಕ್ಷಾ ಕೇಂದ್ರದೊಳಗೆ ಅನುಮತಿಸಬಾರದು. ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು.
ಏನಾದರೂ ಲೋಪದೋಷಗಳಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪರೀಕ್ಷಾ ಕೇಂದ್ರದ 200 ಮೀ.ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅಗತ್ಯ ಮುಂಜಾಗ್ರತೆ ತೆಗೆದುಕೊಂಡು ಅತ್ಯಂತ ಸುಸೂತ್ರವಾಗಿ ಪರೀಕ್ಷೆ ನಡೆಸುವ ಬಹು ದೊಡ್ಡ ಜವಾಬ್ದಾರಿ ನಿಮಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮೊರಟಗಿ ಅಧಿಕಾರಿಗಳು ಉಪಸ್ಥಿತರಿದ್ದರು.