ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಗೆ ಕುಡಿಯಲು ನೀರು ಬಿಡುವಂತೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡಿದ ಮನವಿಗೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ಒಪ್ಪಿಗೆ ಸೂಚಿದಿದ್ದಾರೆ.
ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ದೇವೇಂದ್ರ ಫಡ್ನವೀಸ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಆ ಭಾಗದ ಮುಖಂಡರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆಯಾಗಿದೆ. ಇದರಿಂದ ಈ ಭಾಗದಲ್ಲಿ ಕುಡಿಯುವ ನೀರೀನ ಸಮಸ್ಯೆ ಎದುರಾಗಿದೆ. ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ ಸ್ಥಿತಿ ಉಂಟಾಗಿದೆ. ರೈತರ ಬೆಳೆಗಳಿಗೂ ನೀರಿನ ಸಮಸ್ಯೆ ಎದುರಾಗಿದ್ದು ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಕೃಷ್ಣಾ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಅಲ್ಲದೇ, ಈ ಕುರಿತು ಮನವಿ ಪತ್ರವನ್ನೂ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ಸಕಾರಾತ್ಮಕವಾಗಿ ಸ್ಪಂದಿಸಿದರು. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ತಕ್ಷಣವೇ ಕೋಯ್ನಾ ಮತ್ತು ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ 3 ಟಿ. ಎಂ. ಸಿ ನೀರು ಮತ್ತು ಚಿತ್ರಾ ಅಣೆಕಟ್ಟಿನಿಂದ ಹಿರಣ್ಯಕೇಶಿ ನದಿಗೆ 1 ಟಿ. ಎಂ. ಸಿ ನೀರು ಬಿಡುವಂತೆ ಸೂಚನೆ ನೀಡಿದರು. ಇದರಿಂದ ಸಂತಸಗೊಡಂ ಅಣ್ಣಾಸಾಹೇಬ ಜೊಲ್ಲೆ, ದೇವೇಂದ್ರ ಫಡ್ನವೀಸ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಪ್ಪಾಣಿ ಮತಕ್ಷೇತ್ರದ ಬಿಜೆಪಿ ಚುನಾವಣೆ ಉಸ್ತುವಾರಿ ಡಾ. ಅಜೀತ ಘೋಪಛಾಡೆ, ಮಹಾದೇವ ರಾಯ ಜಾಧವ, ಮಹಾದೇವ ರೆಂದಾಳೆ, ಸುರೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.