ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಮತ್ತು ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂಮತ್ತು ಮಲೇರಿಯಾ ರೋಗಗಳ ಸ್ಥಿತಿಗತಿ, ನಿವಾರಣೆ ಹಾಗೂ ಕಾರ್ಯತಂತ್ರದ ಬಗ್ಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮುಂಜಾಗೃತೆ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಮಲೇರಿಯಾ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.  ನಿಯಮಿತವಾಗಿ ಪಾಗಿಂಗ್ ಮಾಡುವುದು, ಚರಂಡಿ ಸ್ವಚ್ಛತೆ, ಮಳೆ ನೀರು ನಿಲ್ಲದಂತೆ ಕ್ರಮ ವಹಿಸುವುದರ ಜೊತೆಗೆ ಸಾಂಕ್ರಾಮಿಕ ರೋಗ ಹರಡುವ ಕುರಿತಾಗಿ ಜನ ಸಮುದಾಯದಲ್ಲಿ ಮಲೇರಿಯಾ, ಡೆಂಗ್ಯೂ ರೋಗಗಳ ಲಕ್ಷಣಗಳ ಕುರಿತು ಮತ್ತು ನಾಗರೀಕರ ಕರ್ತವ್ಯಗಳ ಬಗ್ಗೆ  ಜಾಗೃತಿ ಅಭಿಯಾನ ಕೈಗೊಳ್ಳಬೇಕು.  ಹೆಚ್ಚು ರೋಗ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸೊಳ್ಳೆ ಪರದೆ ವಿತರಿಸಲು ಕ್ರಮ ಕೈಗೊಳ್ಳಬೇಕು.  ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಕಾಲದಲ್ಲಿ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದರು.

ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕರ‍್ಯಕ್ರಮವನ್ನು ಹಮ್ಮಿಕೊಂಡು ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ  ಪ್ರಕರಣಗಳು ಹೆಚ್ಚಾಗದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಜಾಗೃತೆ ವಹಿಸಲಾಗಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಜೇಬುನ್ನಿಸಾಬೇಗಂ ಬೀಳಗಿ ಹೇಳಿದರು.

ಜಿಲ್ಲಾ ಕುಷ್ಠರೋಗ ನರ‍್ಮೂಲನಾಧಿಕಾರಿ  ಸಂಪತ್ ಗುಣಾರಿ ಮಾತನಾಡಿ, ಜಿಲ್ಲೆಯಲ್ಲಿ ಕುಷ್ಟರೋಗ ನರ‍್ಮೂಲನಾ ಕರ‍್ಯಕ್ರಮದಡಿ  ರಾಷ್ಟ್ರೀಯ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಾದ್ಯಂತ ಒಟ್ಟು 1630 ತಂಡಗಳನ್ನು ರಚಿಸಲಾಗಿದೆ. ಮನೆಗಳ ಭೇಟಿ ನೀಡಿ ಸಮೀಕ್ಷೆಗೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್. ಎಲ್. ಲಕ್ಕಣ್ಣವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ಡಿಡಿಪಿಐ ಉಮೇಶ ಶಿರಹಟ್ಟಿಮಠ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಎಂ. ಕೋಳೂರ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯರು ಜಿಲ್ಲಾ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌