ರಾಜ್ಯದ ಇತರೆಡೆ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡುತ್ತೇವೆ- ನಾಡನ್ನು ಸರ್ವಜನಾಂಗದ ಶಾಂತಿ ತೋಟ ಮಾಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ, ಜೂನ್ 03: ಬೆಂಗಳೂರು ಜೊತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದ್ದಾರೆ.

ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿ ಬೃಹತ ರೋಡ್ ಶೋನಲ್ಲಿ ಪಾಲ್ಗೊಂಡ ಬಳಿಕ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಇತರೆಡೆ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ. ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿವೆ. ಅಲ್ಲದೇ, ಆ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯೂ ಆಗಲಿದೆ. ಇದಕ್ಕಾಗಿ ಹಗಲಿರುಳು ಶ್ರಮಿಸುತ್ತೇನೆ. ಜಲಸಂಪನ್ಮೂಲ ಸಚಿವನಾಗಿ ವಿಜಯಪುರ ಜಿಲ್ಲೆಯಲ್ಲಿ ಜಲಕಾಂತ್ರಿ ಮಾಡಿದ್ದೇನೆ. ಈಗ ನಾನಾಗಿಯೇ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಷ್ಟಪಟ್ಟು ಪಡೆದಿದ್ದೇನೆ. ಕೈಗಾರಿಕೆಗಳಿಗೆ ಬೇಕಾಗುವ ಜಲಸಂಪನ್ಮೂಲ ನಮ್ಮ ಜಿಲ್ಲೆಯಲ್ಲಿ ಹೇರಳವಾಗಿದ್ದು ಹೊಸ ಕೈಗಾರಿಕೆಗಳನ್ನು ಸ್ಥಾಪಿಸುತ್ತೇನೆ ಎಂದು ಅವರು ಹೇಳಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದು, ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ಮತ್ತು ವಿಶ್ವದ ಗಮನವನ್ನು ರಾಜ್ಯದ ಕಡೆ ಸೆಳೆಯಲು ಹಗಳಿರುಳು ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದರು.

ವಿಜಯಪುರದಲ್ಲಿ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಮಾತನಾಡಿದರು

ರಾಜ್ಯದ ಜನ ಸರ್ವಾಂಗೀಣ ಅಭಿವೃದ್ಧಿಗಾಗಿ ಅಪಾರ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್‍ನ್ನು ಭರ್ಜರಿಯಾಗಿ ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಮತದಾರರ ಆಸೆಯಗಳಿಗೆ ಅನುಗುಣವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಸೇರಿದಂತೆ ನಾವೆಲ್ಲ ಸಚಿವರು ಕೆಲಸ ಮಾಡುತ್ತೇವೆ. ರಾಜ್ಯದ ಘನತೆ, ಗೌರವ, ಗತವೈಭವ ಮರಳಿ ತರುತ್ತೇವೆ. ನೀಡಿದ ಭರವಸೆಯಂತೆ ಈಗಾಗಲೇ ಐದು ಗ್ಯಾರಂಟಿ ಸ್ಕೀಂಗಳನ್ನು ಜಾರಿಗೆ ತಂದಿದ್ದೇವೆ ಎಂದು ಅವರು ಹೇಳಿದರು.

ವಿಜಯಪುರ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಬ್ದುಲ್ ಹಮಿದ ಮುಶ್ರಿಫ್ ಅವರು ಅಲ್ಪ ಮತಗಳ ಅಂತರದಿಂದ ಸೋತಿದ್ದು ನೋವು ತಂದಿದೆ. ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ರಾಜ್ಯ ಮತ್ತು ಜಿಲ್ಲೆಯಲ್ಲಿ ಕೋಮು ಭಾವನೆ ಕೆರಳಿಸಲು ಅವಕಾಶ ನೀಡುವುದಿಲ್ಲ. ಎಲ್ಲರೂ ಸೌಹಾರ್ದದಿಂದ ಬದುಕು ಕಟ್ಟಿಕೊಳ್ಳಲು ಪೂರಕ ವಾತಾವರಣ ತರುತ್ತೇವೆ.

ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಹಾಗೂ ಅಬ್ದುಲ್ ಹಮೀದ ಮುಶ್ರಿಫ್ ಮಾತನಾಡಿ, ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಜಲಕ್ರಾಂತಿ ಮಾಡಿದ್ದಾರೆ. ಈಗ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಸಚಿವರಾಗಿ ಈ ಕ್ಷೇತ್ರಗಳಲ್ಲಿಯೂ ಕ್ರಾಂತಿ ಮಾಡಲಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿಸುವ ಮೂಲಕ ಜನರ ಬದುಕನ್ನು ಉಜ್ವಲಗೊಳಿಸಲಿದ್ದಾರೆ. ಭವಿಷ್ಯದಲ್ಲಿ ಇನ್ನೂ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ವಿ. ಎಸ್. ಪಾಟೀಲ, ಸಂಗಮೇಶ ಬಬಲೇಶ್ವರ, ಆಜಾದ್ ಪಟೇಲ, ಅಬ್ದುಲ ರಜಾಕ್ ಹೊರ್ತಿ ಟಪಾಲ ಇಂಜನೀಯರ್, ಡಾ.ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮರ್ಚಂಟ್ಸ್ ಅಸೋಸಿಯೇಶನ್ ಮತ್ತು ಮಹಾನಗರ ಪಾಲಿಕೆ ಸದಸ್ಯರು ಹಾಗೂ ನಾನಾ ಸಂಘಟನೆಗಳ ವತಿಯಿಂದ ಸಚಿವ ಎಂ. ಬಿ. ಪಾಟೀಲರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಓಡಿಶಾದಲ್ಲಿ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಣೆ ಮಾಡಲಾಯಿತು.

Leave a Reply

ಹೊಸ ಪೋಸ್ಟ್‌