ಬಾಲ್ಯ ವಿವಾಹ ತಡೆಗಟ್ಟಲು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯವಿವಾಹ ತಡೆಯುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಅಧಿಕಾರಿಗಳೊಂದಿೆ ಸಭೆ ನಡೆಸಿದರು

ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ  ಹಿನ್ನೆಲೆಯಲ್ಲಿ  ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ, ಪೊಲೀಸ್, ಕಾನೂನು ನೆರವು ಹಾಗೂ ಸಮಾಲೋಚನಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿಯಮಾನುಸಾರ ಕ್ರಮ ಜರುಗಿಸಬೇಕು. ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪಿಡಿಓ ಗಳು ಬಾಲ್ಯ ವಿವಾಹ ನಡೆಯದಂತೆ ಎಚ್ಚರಿಕೆ ವಹಿಸಿ, ಪ್ರಕರಣಗಳು ನಡೆಯದಂತೆ ಮುಂಜಾಗೃತೆ ಕ್ರಮ ಕೈಗೊಳ್ಳಬೇಕು.  ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಲಿಂಗಾನುಪಾತವನ್ನು ಉತ್ತಮಗೊಳಿಸಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಸಮುದಾಯವನ್ನು ಪ್ರೇರೇಪಿಸಬೇಕು.  ಹೆಣ್ಣು ಮಗುವಿನ ಜನನವನ್ನು ಸಂಭ್ರಮದಿಂದ ಆಚರಿಸುವುದು, ಐದು ವರ್ಷದೊಳಗಿನ ಹೆಣ್ಣು ಮಕ್ಕಳಲ್ಲಿ ಕಂಡು ಬರುವ ಅಪೌಷ್ಠಿಕತೆ ಮತ್ತು ರಕ್ತಹೀನತೆ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

ಈ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನೂ ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ, ಎಎಸ್ಪಿ ಶಂಕರ ಮಾರಿಹಾಳ, ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ. ಕೆ. ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್. ಎಲ್. ಲಕ್ಕಣ್ಣವರ, ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌