ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅರ್ಥಪೂರ್ಣವಾಗಿ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜೂ. 21 ರಂದು ಜಿಲ್ಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಂದು ಬೆ. 6 ರಿಂದ ಬೆ. 7.30ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ.  ಆಯುರ್ವೇದ, ಯುನಾನಿ ಕಾಲೇಜ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ  ಸೇರಿದಂತೆ ನಾನಾ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳ್ಳುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸುಮಾರು 1000 ಸಾರ್ವಜನಿಕರು,ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ನಾನಾ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಸಮನ್ವಯತೆಯಿಂದ ನಿರ್ವಹಿಸಿ,ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು  ಹೇಳಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವ ಸಿದ್ಧತೆ ಸಭೆ ನಡೆಯಿತು

ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ, ಅಲ್ಪೋಪಹಾರದ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ ಒಳಗೊಂಡಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವೇದಿಕೆ ವ್ಯವಸ್ಥೆ, ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಬೇಕು. ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತು ಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್.20ರ ಬೆಳಿಗ್ಗೆ 8 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿರುವ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಚಾಲನೆ ನೀಡಲಿದ್ದಾರೆ. ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಳ್ಳುವ ಜಾಥಾ ನಾನಾ ಮಾರ್ಗಗಳಲ್ಲಿ ಸಂಚರಿಸಿ, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಿಕಿ, ಜಿಲ್ಲಾ ಆಯುಷ್ ಅಧಿಕಾರಿ ಆರ್. ಎಸ್. ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್. ಎಲ್. ಲಕ್ಕಣ್ಣವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ ಶಿರಹಟ್ಟಿಮಠ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌