ವಿಜಯಪುರ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ. ನಾನಾ ಕಡೆಗಳಲ್ಲಿ ಹತ್ಯೆಗಳು ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯಾದ್ಯಂತ ನಾನಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರ್. ಎಸ್. ಪಾಟೀಲ ಕೂಚಬಾಳ ಆರೋಪಿಿದರು.
ರಾಜ್ಯ ರೈತ ಮೋರ್ಚಾ ಕಾರ್ಯದರ್ಸಿ ಸಂಜಯ ಪಾಟೀಲ ಕನಮಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ. ಇದು ಖಂಡನೀಯ. ಎಪಿಎಂಸಿ ಕಾನೂನು ರದ್ದು ಮಾಡುವ ಮೂಲಕ ರೈತರು ಬೆಳೆದ ಬೆಳೆಯನ್ನು ಬೇರೆಡೆಗೆ ಮಾರಾಟ ಮಾಡಲು ಕಡಿವಾಣ ಹಾಕಿದಂತಾಗಿದೆ. ಕಾಂಗ್ರೆಸ್ ಸರಕಾರ 8 ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದು ಮಾಡಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ರದ್ದು ಮಾಡಿರುವ ಕಾಯ್ದೆಯನ್ನು ಮರುಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು.