ವಿಜಯಪುರ: ಮಹಾರಾಷ್ಟ್ರ ಮತ್ತು ನೆರೆಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದರು.
ಜಿ. ಪ. ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಹಿಂದೆ ಆಲಮಟ್ಟಿ ಜಲಾಶಯದಲ್ಲಿ ಲೈವ್ ಸ್ಟೋರೇಜ್ ಕೇವಲ 2 ಟಿಎಂಸಿಗೆ ಇಳಿಕೆಯಾಗಿತ್ತು. ಇದು ಆತಂಕಕ್ಕೆ ಕಾರಣವಾಗಿತ್ತು. ಆದರೆ, ಈಗ ಜಲಾಷಯಕ್ಕೆ ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಪರಿಸ್ಥಿತಿ ಸುಧಾರಿಸಿದೆ. ಲೈವ್ ಸ್ಟೋರೇಜ್ 64 ಟಿಎಂಸಿ ತಲುಪಿದೆ. ಹೀಗಾಗಿ ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗಳಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಇರುವ 38 ಗ್ರಾಮಗಳಿಗೆ ಟ್ಯಾಂಕರ್ಗಳ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ನೀರು ಪೂರೈಕೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಶೇ. 50 ರಷ್ಟು ಇಳಿಕೆಯಾಗಲಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಸೂಚನೆ ನೀಡಲಾಗಿದೆ. ಕಣಕಾಲ, ದಿಂಡವಾರ, ಕಾಖಂಡಕಿಯಲ್ಲಿ ವಿದ್ಯುತ್ ವಿತರಣೆ ಕೇಂದ್ರಗಳಿಗೆ ಟೆಂಡರ್ ಆಗಿದ್ದರೂ ಗುತ್ತಿಗೆದಾರರು ಕೆಲಸ ಆರಂಭಿಸಿಲ್ಲ. ಹೀಗಾಗಿ ಕೂಡಲೇ ಈ ವಿದ್ಯುತ್ ವಿತರಣಾ ಕೇಂದ್ರಗಳ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಹೂವಿನ ಹಿಪ್ಪರಗಿಯಲ್ಲಿ ಭೂಮಿ ಲಭ್ಯವಿದ್ದು, 110 ಕೆವಿ ಸ್ಟೇಷನ್ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಕುಡಿಯುವ ನೀರು ಮೊದಲಾದ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಆಯಾ ಭಾಗದ ಶಾಸಕರನ್ನು ಸಂಪರ್ಕಿಸಿ, ಅವರಿಂದ ಸಮಸ್ಯೆಗಳ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.
ಬರದ ಛಾಯೆ ದೂರವಾಗುವ ವಿಶ್ವಾಸವಿದೆ
ಜಿಲ್ಲೆಯಲ್ಲಿ ಈಗ ಮಳೆಯಾಗುತ್ತಿರುವುದರಿಂದ ಬರದ ಛಾಯೆ ದೂರವಾಗುವವ ಆಶಯವಿದೆ. ಈ ಛಾಯೆ ಸಂಪೂರ್ಣವಾಗಿ ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಸಚಿವ ಪಾಟೀಲ ಆಶಯ ವ್ಯಕ್ತಪಡಿಸಿದರು.
ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಲು ಕೇಂದ್ರ ಸರಕಾರ ಅದರದೇ ಆದ ಮಾರ್ಗಸೂಚಿ ರೂಪಿಸಿದೆ. ಆ ಮಾರ್ಗಸೂಚಿ ಪ್ರಕಾರ ಮಾತ್ರ ಕ್ರಮ ಕೈಗೊಳ್ಳಬೇಕಿದೆ ಎಂದು ಇದೇ ವೇಳೆ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 2.78 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ತೊಗರಿ ಜುಲೈ ಮಾಸಾಂತ್ಯದವರೆಗೂ ಅವಕಾಶವಿದೆ. ಇನ್ನೂ 1 ಲಕ್ಷ ಹೆಕ್ಟೇರ್ ತೊಗರಿ ಬಿತ್ತನೆಯಾಗುವ ನಿರೀಕ್ಷೆಯಿದೆ. ಉಳ್ಳಾಗಡ್ಡಿ ಬೆಳೆಗೆ ಸಂಬಂಧಿಸಿದಂತೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜವನ್ನು ದೊರಕಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಎಂ. ಬಿ. ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಧೋಂಡಿಬಾ ಕಟಕದೊಂಡ, ರಾಜುಗೌಡ ಪಾಟೀಲ, ಜಿಲ್ಲಾಧಿಕಾರಿ ಟಿ. ಭೂಬಾಲನ, ಜಿ. ಪಂ. ಸಿಇಓ ರಾಹುಲ ಶಿಂಧೆ, ಎಸ್ಪಿ ಎಚ್. ಡಿ. ಆನಂದಕುಮಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.