ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ: ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ ನೀಡಿದ್ದಾರೆ.

ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳೊಂದಿಗೆ ನಡೆಸಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈ ನಿಟ್ಟಿನಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ರಸಗೊಬ್ಬರ, ಬಿತ್ತನೆ ಬೀಜಗಳನ್ನು ದಾಸ್ತಾನಿಟ್ಟುಕೊಂಡು ಅವಶ್ಯಕ ಸಮಯಕ್ಕೆ ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ಕೃಷಿ ಅಧಿಕಾರಿಗಳು ಮಾಹಿತಿ ನೀಡಿ, ಮೇ ಮತ್ತು ಜೂನ್ ತಿಂಗಳಲ್ಲಿ ವಾಡಿಕೆಯಂತೆ ಕಡಿಮೆ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯ ಕುಂಠಿತಗೊಂಡಿತ್ತು. ಈ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬಿತ್ತನೆ ಕಾರ್ಯವೂ ಚುರುಕುಗೊಂಡಿದೆ. ಜಿಲ್ಲೆಯಲ್ಲಿ 20 ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ, ರಸಗೊಬ್ಬರ ದಾಸ್ತಾನಿಟ್ಟುಕೊಳ್ಳಲಾಗಿದ್ದು, ಯಾವುದೇ ಕೊರತೆಯಾಗುವುದಿಲ್ಲ ಎಂದು ಹೇಳಿದರು.

ಜಿಲ್ಲೆಯ ಪ್ರತಿ ಗ್ರಾಮ, ಜನವಸತಿಗಳಿಗೆ ಕುಡಿಯುವ ನೀರಿನ ತೊಂದರೆಯಾಗಬಾರದು. ನೀರಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕುರಿತು ಮುಂಚೆಯೇ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.

ವಿಜಯಪುರ ನಗರದ 30 ವಾರ್ಡಗಳಿಗೆ ಕೊಲ್ಹಾರದಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದ 5 ವಾರ್ಡಗಳಿಗೆ ಭೂತನಾಳ ಕೆರೆಯಿಂದ ನೀರು ಪೂರೈಸಲಾಗುತ್ತಿದೆ.

ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದ 25 ಹಳ್ಳಿಗಳಲ್ಲಿ 38 ಟ್ಯಾಂಕರ್‍ ಮೂಲಕ ನೀರು ಪೂರೈಸಲಾಗುತ್ತಿದೆ. ಒಟ್ಟು 48 ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ವಿವಿಧ ಜನ ವಸತಿಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆ ಮಾಹಿತಿ ಒದಗಿಸಲಾಯಿತು.

ಸರಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
ಈ ಯೋಜನೆಯಡಿ ನೋಂದಣಿ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಿ, ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡು ಹೆಚ್ಚಿನ ಅರ್ಹ ಜನರಿಗೆ ಈ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸಬೇಕು.ಜಿಲ್ಲೆಯಿಂದ ವಲಸೆ ಹೋದ ಜನರಿಗೆ ಗೃಹಲಕ್ಷ್ಮಿ ಯೋಜನೆ ಕುರಿತು ಮಾಹಿತಿ ಒದಗಿಸುವ ಮೂಲಕ ನೋಂದಾಯಿಸಲು ಕ್ರಮ ವಹಿಸುವಂತೆ ತಿಳಿಸಿದ ಅವರು, ಸರ್ಕಾರದ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹಾಗೂ ಗೃಹ ಲಕ್ಷ್ಮಿ ಯೋಜನೆಗಳು ಜಿಲ್ಲೆಯಲ್ಲಿ ಸುವ್ಯವಸ್ಥಿತ ಅನುಷ್ಠಾನಗೊಳಿಸಬೇಕು ಎಂದು ಅವರು ಹೇಳಿದರು.

ತಾಲೂಕಾ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಯುವಜನ ಮತ್ತು ಕ್ರೀಡಾ ಇಲಾಖೆ ಆದ್ಯತೆ ಮೇಲೆ ಸೂಕ್ತ ಜಾಗ ಗುರುತಿಸಿಬೇಕು. ತಾಲೂಕಾ ಕೇಂದ್ರದಲ್ಲಿ ಜಾಗ ಲಭ್ಯವಿಲ್ಲದಿದ್ದಲ್ಲಿ ಆಯಾ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜಾಗವಿರುವ ಬಗ್ಗೆ ಖಚಿತಪಡಿಸಿಕೊಂಡು ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಸೂಕ್ತ ಸ್ಥಳ ಗುರುತಿಸಿ ಮಾಹಿತಿ ಒದಗಿಸಬೇಕು. ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ನಿಯಮಿತವಾಗಿ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳ ತಪಾಸಣೆ ನಡೆಸಿ, ಮೂಲಸೌಲಭ್ಯದ ಕುರಿತು ಪರಿಶೀಲನೆ ನಡೆಸಬೇಕು. ಮೂಲಸೌಲಭ್ಯ ಕೊರತೆ ಇರುವ ಕೇಂದ್ರಗಳ ಮಾಹಿತಿ ಪಡೆದು, ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಿಗೆ ನಿಯಮಿತವಾಗಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಗಸ್ಟ್ ಅಂತ್ಯದವರೆಗೆ ಎಲ್ಲ ವಸತಿ ನಿಲಯಗಳಿಗೆ ಭೇಟಿ ನೀಡಿ, ಆಯಾ ವಸತಿ ನಿಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಕುರಿತು, ಮುಖ್ಯವಾಗಿ ಬಿಸಿನೀರು, ಆಹಾರ, ಸಿಬ್ಬಂದಿಗಳ ಕಾರ್ಯನಿರ್ವಹಣೆ, ನಿರ್ವಹಿಸುತ್ತಿರುವ ಕಡತ, ವಹಿಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾಸ್ಟೆಲ್‍ಗಳ ಕುರಿತು ನಿಗಾ ವಹಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ವಸತಿ ನಿಲಯಗಳ ಖಾಲಿ ಜಾಗದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ಹೇಳಿದರು.

ಎಸ್‍ಸಿಎಸ್‍ಪಿ ಟಿಎಸ್‍ಪಿ ಹಾಗೂ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಗಳು ಪ್ರತಿ ತ್ರೈಮಾಸಿಕವಾಗಿ ಸಭೆ ಜರುಗಿಸಬೇಕು. ವಿವಿಧ ಕಾರ್ಯಕ್ರಮಗಳ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಮುಂದಾಗಬೇಕು. ಜಿಲ್ಲಾ ಆಸ್ಪತ್ರೆ ಹಾಗೂ ವಸತಿ ನಿಲಯಗಳು ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸೌಲಭ್ಯ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೇ ಮಾದರಿಯಲ್ಲಿ ಜಿಲ್ಲೆಯ ಪ್ರತಿಯೊಂದು ಶಾಲೆ, ಅಂಗನವಾಡಿ ಕೇಂದ್ರಗಳು ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಹೆಣ್ಣು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ವಸತಿ ನಿಲಯ ಹೊಂದುವ ಕುರಿತು ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಭೇಟಿ ನೀಡಿ ಶಾಲಾ ಕೊಠಡಿ ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲನೆ ನಡೆಸಬೇಕು. ಸಣ್ಣಪುಟ್ಟ ದುರಸ್ತಿಗಳಿದ್ದಲ್ಲಿ ಕೂಡಲೇ ದುರಸ್ತಿಗೆ ಕ್ರಮ ವಹಿಸಬೇಕು. ಪ್ರತಿ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯ ಇರುವಂತೆ ನೋಡಿಕೊಳ್ಳಬೇಕು. ಮೂಲಭೂತ ಸೌಕರ್ಯಗಳಿರುವ ಕುರಿತು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಚೇತನ ಸಂಜೆ ಕಾರ್ಯಕ್ರಮ ನಡೆಸಲಾಗುತ್ತಿದೆ. ನುರಿತ ಸರಕಾರಿ ಶಿಕ್ಷಕರಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳ ಕುರಿತು ವಿಶೇಷ ಬೋಧನೆ ಹಾಗೂ ಪರಿಹಾರ ಬೋಧನೆ ನಡೆಸಲಾಗುತ್ತಿದೆ. ಸಾಧಕರನ್ನು ಆಹ್ವಾನಿಸಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ 9ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ಟಾಪರ್ಸ್‍ಗಳಿಗಾಗಿ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗಿದೆ. ಇದರಿಂದ ಅವರ ಜ್ಞಾನದ ಹರವು ವಿಸ್ತಾರಗೊಳ್ಳಲು ಸಹಾಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಿಂಧೆ ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌