ವಿಜಯಪುರ: ಡೇ ನಲ್ಮ ಅಭಿಯಾನದ ಪಿಎಂ ಸ್ವ-ನಿಧಿ ಅಡಿ ಬಾಕಿ ಇರುವ ಅರ್ಜಿಗಳ ಸಾಲ ಮಂಜೂರಾತಿಗೆ ಶೀಘ್ರ ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವ ನಿಧಿ ಸಮೃದ್ದಿ ಯೋಜನೆಯಡಿ ಎಂಟು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಪಿಂಕ್ ಆಟೋ ತರಬೇತಿ ಪಡೆದ ಮಹಿಳೆಯರಿಗೆ ಪಿಂಕ್ ಆಟೋ ಖರೀದಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಾಲ ಒದಗಿಸಲು ಕ್ರಮ ವಹಿಸಬೇಕು.
ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ ಹಾಗೂ ಪ್ರಧಾನಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯ ನಿರುದ್ಯೊಗ ಯುವಕ-ಯುವತಿಯರನ್ನು ಗುರುತಿಸಿ, ಜಿಲ್ಲೆಯ ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗೆ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.