ಗ್ರಾಮೀಣ ಕೂಲಿ ಕಾರ್ಮಿಕರ ಶಿಶು ಪೋಷಣೆ ಸರಕಾರದ ಮಡಿಲಿಗೆ: ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಲು ರಾಜ್ಯ ಸರಕಾರ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದೆ.  ಈ ಮೂಲಕ ಕೂಲಿ ಕಾರ್ಮಿಕರ ಶಿಶುಗಳ ಪೋಷಣೆ ಮಾಡುವ ಜವಾಬ್ದಾರಿಯನ್ನು ಸರಕಾರ ತನ್ನ ಮಡಿಲಿಗೆ ಹಾಕಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ.

ಜಿಲ್ಲೆಯ ಆಯ್ದ 163 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗ್ರಾ. ಪಂ. ಮಟ್ಟದಲ್ಲಿ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಕಾರ್ಯಾರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ಕೂಸಿನ ಮನೆ ಸಿಬ್ಬಂದಿಗಳು

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿರುವ 22 ರಿಂದ 45 ವರ್ಷ ವಯಸ್ಸಿನೊಳಗಿನ ಕನಿಷ್ಠ 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ 10 ಜನ ಮಹಿಳಾ ಕೂಲಿ ಕಾರ್ಮಿಕರನ್ನು ಈ ಕೂಸಿನ ಆರೈಕೆ ಮಾಡಲು(ಕೇರ್ ಟೆಕರ್ಸ್) ನೇಮಕ ಮಾಡಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ.  ಇವರಿಗೆ ಸರಕಾರದಿಂದ ಪ್ರತ್ಯೇಕವಾಗಿ ಗೌರವಧನ ನೀಡದೇ ಮನರೇಗಾ ಯೋಜನೆಯಡಿ ಎನ್. ಎಂ. ಆರ್ ಸೃಜನೆ ಮಾಡಿ ದಿನಕ್ಕೆ ರೂ. 316 ರಂತೆ ನೂರು ದಿನಗಳವರೆಗ ಕೆಲಸ ನೀಡಲಾಗುತ್ತಿದೆ.  ಒಂದು ವೇಳೆ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರು 100 ದಿನ ಕೆಲಸ ನಿರ್ವಹಿಸಿದರೆ ನಂತರ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆ.

ಕೂಸಿನ ಮನೆ ಕುಶಲತೆಯ ನಿರ್ವಹಣೆಗೆ ತರಬೇತಿ

ಕೂಸಿನ ಮನೆ(ಶಿಶು ಪಾಲನಾ ಕೇಂದ್ರ) ಪ್ರಾರಂಭಕ್ಕೆ ರಾಜ್ಯ ಮಟ್ಟದಲ್ಲಿ ಜಿಲ್ಲೆಯ 5 ಜನರಿಗೆ ತರಬೇತಿ ನೀಡಲಾಗಿದೆ.  ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದುಕೊಂಡ ಮಾಸ್ಟರ್ ಟ್ರೇನರ್ ಗಳು ವಿಜಯಪುರ ಜಿಲ್ಲೆಯ ಐದು ಸ್ಥಳಗಳಲ್ಲಿ ಈಗಾಗಲೇ ಎಲ್ಲ ಗ್ರಾ. ಪಂ. ಕೇರ್ ಟೇಕರ್ಸ್ ಗಳಿಗೆ ತರಬೇತಿ ನೀಡಿದ್ದಾರೆ.

ಅನುದಾನ

ಕೂಸಿನ ಮನೆ(ಶಿಶು ಪಾಲನಾ ಕೇಂದ್ರ)ಗಳನ್ನು ಆರಂಭಿಸಲು ಗ್ರಾ. ಪಂ. ಮಟ್ಟದಲ್ಲಿ ಖಾಲಿ ಇರುವ ಸರಕಾರಿ ಶಾಲೆ, ಅಂಗನವಾಡಿ, ಸಮುದಾಯ ಭವನ ಸೇರಿದಂತೆ ಇತರೆ ಸರಕಾರಿ ಕಟ್ಟಡಗಳ ಆಯ್ಕೆಗೆ ಪರಿಗಣಿಸಿದೆ.  ಈ  ಕಟ್ಟಡಗಳ ಅಲ್ಪ-ಸ್ವಲ್ಪ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರಕಾರ ಆರಂಭದಲ್ಲಿ ಪ್ರತಿ ಘಟಕಕ್ಕೆ ರೂ. 1 ಲಕ್ಷ ನುದಾನ ಬಿಡುಗಡೆ ಮಾಡುತ್ತದೆ.  ಶಿಶುಗಳಿಗೆ ಪೂರಕ ಪೌಷ್ಠಿಕ ಆಹಾರ, ಅಗತ್ಯ ಔಷಧ ಮತ್ತಿತರ ಸೌಲಭ್ಯಗಳನ್ನು ಈ ಕೇಂದ್ರದಲ್ಲಿ ದಾಸ್ತಾನು ಇಡಲಾಗುವುದು.

ಮುಖ್ಯ ಉದ್ದೇಶ

ಕೂಸಿನ ಮನೆ(ಶಿಶು ಪಾಲನಾ ಕೇಂದ್ರ)ಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ.  ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ.  ಇಂಥ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ.  ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ.  ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ.  ಇದರಿಂದ ಮಕ್ಕಳು ಅಪೌಷ್ಠಿಕತೆಗೆ ಒಳಗಾಗಬಹುದಾಗಿದೆ.  ಅಲ್ಲದೇ, ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ.  ಈ ಸಮಸ್ಯೆಗಳ ನಿವಾರಣೆಗೆ ಸರಕಾರ ಈ ಯೋಜನೆ ಆರಂಭಿಸಿದೆ.  ಹಳ್ಳಿಗಳ ಮಹಿಳೆಯರು ತಮ್ಮ ಮಕ್ಕಳ ಕುರಿತು ಚಿಂತಿಸಿ, ಮಾನಸಿಕವಾಗಿ ಕುಗ್ಗದೇ ಈ ಯೋಜನೆಯ ಸದುಪಯೋಗ ಪಡೆದುಕೊಂಡು ನಿಶ್ಚಿಂತೆಯಿಂದ ಕೂಸಿನ ಮನೆಯಲ್ಲಿ ತಮ್ಮ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳಬಹುದಾಗಿದೆ ಎಂದು ರಾಹುಲ ಶಿಂಧೆ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌