ವಿಜಯಪುರ: ಕೇಂದ್ರ ಪುರಸ್ಕೃತ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ವರ್ಷದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ ತಿಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಇಲಾಖೆಯಡಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸುವ ಬೊರವೆಲ್‌ಗಳನ್ನು ನಿಯಮಾನುಸಾರ ಹಾಗೂ ಸಮರ್ಪಕವಾಗಿ ಕೊರೆಸಬೇಕು. ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕೊರೆದ ಬೊರವೆಲ್‌ಗಳಿಗೆ ಸಕಾಲದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಯಾವುದೇ ವಿಳಂಬ ಮಾಡದೇ ರೈತರಿಗೆ ಅನುಕೂಲ ಒದಗಿಸಿಕೊಡುವ ಮೂಲಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ರೇಷ್ಮೆ ಉತ್ಪಾದನೆಗೆ ವಿಫುಲ ಅವಕಾಶಗಳಿದ್ದು, ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ರೈತರಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಕ್ರೀಯಾಯೋಜನೆ ಸಿದ್ಧಪಡಿಸಿ ರೇಷ್ಮೆ ಉತ್ಪಾದನೆಗೆ ಉತ್ತೇಜನ ನೀಡುವಂತೆ ಅವರು ಹೇಳಿದರು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕ್ರೀಯಾಯೋಜನೆಯಡಿ ಅನುದಾನ ಕಾಯ್ದಿರಿಸಿ ನಗರ ವ್ಯಾಪ್ತಿಯಲ್ಲಿರುವ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ, ಸ್ಟಡಿ ರೂಂ, ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಕೃಷಿ ಇಲಾಖೆಯಲ್ಲಿ ರಾಷ್ಟ್ರೀಯ ಆಹಾರ ಸುರಕ್ಷತಾ ಅಭಿಯಾನ, ಸೂಕ್ಷö್ಮ-ಹನಿ ನೀರಾವರಿ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಾನಯನ ಅಭಿವೃದ್ದಿ ಘಟಕ, ಕೇಂದ್ರ ವಲಯದ ಅನುದಾನ ವೆಚ್ಚ ಮಾಡಲಾಗಿದೆ. ಬೀಜ ವಿತರಣೆ, ಮಣ್ಣಿನ ಸತ್ವ ಹೆಚ್ಚಿಸುವಿಕೆ, ಸಾವಯವ ಇಂಗಾಲ ಹೆಚ್ಚಿಸುವಿಕೆ, ಕೃಷಿ ಯಾಂತ್ರೀಕರಣ ಇತರೆ ರಾಜ್ಯ ವಲಯ ಯೋಜನೆಯಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿಗಳು ಅವರು ಸೂಚನೆ ನೀಡಿದರು.
ಮೀನುಗಾರಿಕೆ ಇಲಾಖೆಯಿಂದ ಎಸ್‌ಸಿಪಿ ಟಿಎಸ್‌ಪಿ ಯೋಜನೆಯಡಿ ಮೀನುಗಾರರಿಗೆ ಪರಿಕರಗಳನ್ನು ವಿತರಿಸಬೇಕು. ಬಾಲ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಅನುದಾನ ಬಳಸಬೇಕು. ಬಾಲಕಾರ್ಮಿಕ ಮಕ್ಕಳು ಅವರ ಪೋಷಕರು ಕರೆದುಕೊಂಡು ಹೋದ ಸಂದರ್ಭದಲ್ಲಿ ಮತ್ತೊಮ್ಮೆ ಬಾಲಕಾರ್ಮಿಕರಾಗಿ ಉಳಿಯದಂತೆ ನಿಗಾ ವಹಿಸುವಂತೆ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದಲ್ಲಿ ನಡೆಯುವ ಸಭೆಗಳಿಗೆ ಸಂಬAಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಭೆಯಲ್ಲಿ ನಾನಾ ಇಲಾಖೆಗಳಡಿ ಜುಲೈ-2023ರ ತಿಂಗಳ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಕುರಿತು ಚರ್ಚಿಸಲಾಯಿತು.
ಈ ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.