ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ, ಶುದ್ಧ ಕುಡಿಯುವ ನೀರು ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತಿಯಲ್ಲಿ ಕುಡಿಯುವ ನೀರು ಮತ್ತು ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಕುರಿತು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲ ಜಲಮೂಲಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಜಲ ಮೂಲಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು.ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ ತಿಂಗಳು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ (ಆರ್.ಡಬ್ಲೂ.ಎಸ್) ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಎಲ್ಲ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಂದ ಜಲಮೂಲಗಳು ಸ್ವಚ್ಛತೆ ಇರುವ ಕುರಿತು ದೃಢೀಕೃತ ವರದಿಯನ್ನು ಸಂಗ್ರಹಿಸಿ, ಪ್ರತಿ ತಿಂಗಳು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು.

ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ಲೋಪ ಸಹಿಸುವುದಿಲ್ಲ. ಒಂದು ವೇಳೆ ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಆರ್.ಓ. ಪ್ಲಾಂಟ್ ಗಳು ಕಡ್ಡಾಯವಾಗಿ ಸುಸ್ಥಿತಿಯಲ್ಲಿರುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತಿಯೊಂದಿಗೆ ಸಮನ್ವಯ ಸಾಧಿಸಿಕೊಂಡು ನಿರ್ವಹಣೆ ಮಾಡಬೇಕು.
ಸಣ್ಣ ಪುಟ್ಟ ದುರಸ್ಥಿಗಳಿದ್ದಲ್ಲಿ ಸಂಬಂಧಿಸಿದ ಏಜೆನ್ಸಿಯವರಿಂದ ದುರಸ್ತಿ ಮಾಡಿಸಬೇಕು. ಒಂದು ವೇಳೆ ಸಂಬಂಧಿಸಿದ ಏಜೆನ್ಸಿಯವರು ಸ್ಪಂದಿಸದೇ ಇದ್ದರೆ ಅವರಿಗೆ ನೋಟಿಸ್ ಜಾರಿ ಮಾಡುವುದು. ನೋಟಿಸ್ ನೀಡಿದರೂ ಸಹ ಅವರು ದುರಸ್ತಿ ಮಾಡಲು ಹಿಂದೇಟು ಹಾಕಿದರೆ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ದೂರುಗಳು, ಸಮಸ್ಯೆಗಳು ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಸಂಬಂಧಿಸಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ವಿಷಯವನ್ನು ಮನದಟ್ಟು ಮಾಡಿಕೊಂಡು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸಮಸ್ಯೆ ಬಗೆಹರಿಸಬೇಕು.

ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಆರ್.ಡಬ್ಲೂ.ಎಸ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮಗಳಿಗೆ ಭೇಟಿ ನೀಡಿ ಮೇಲುಸ್ತುವಾರಿ ನಡೆಸುವಂತೆ ಅವರು ಸೂಚನೆ ನೀಡಿದರು.

ಗೃಹ ಲಕ್ಷ್ಮೀ ಯೋಜನೆ

ಸರಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮಿ ಯೋಜನೆಯನ್ನು ಆ.30ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಎಲ್ಲ ಗ್ರಾಮ ಪಂಚಾಯತಿ ಹಂತದಲ್ಲಿ ಸಾರ್ವಜನಿಕರಿಗೆ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲು ಸರ್ಕಾರ ನಿರ್ದೇಶಿಸಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯತಿಯ ಸ್ಥಳ, ಸಮುದಾಯ ಭವನ, ಬಯಲು ಜಾಗದಲ್ಲಿ ವೇದಿಕೆ ಸಿದ್ದಪಡಿಸಿ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸಬೇಕು. ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಬಳಸಿಕೊಳ್ಳಬಾರದು ಮತ್ತು ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸ ಬಾರದೆಂದು ಸೂಚಿಸಿದ ಅವರು, ಕಾರ್ಯಕ್ರಮದ ಸ್ಥಳದಲ್ಲಿ ದ್ವಿಮುಖ ಸಂವಹನ ವ್ಯವಸ್ಥೆ, ಪ್ರೊಜೆಕ್ಟರ್, ಧ್ವನಿವರ್ಧಕ, ಆಡಿಯೋ ವ್ಯವಸ್ಥೆ, ಕುಡಿಯುವ ನೀರು, ನೆರಳು ಮತ್ತು ಅಲ್ಪೋಪಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು.  ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಮಾಡಿ ಕನಿಷ್ಠ 2000 ಜನರು ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಬೆಂಚ್ ಅಭಿಯಾನಕ್ಕೆ ಶಹಬ್ಬಾಷಗಿರಿ: ಜಿಲ್ಲೆಯಲ್ಲಿ ಕೈಗೊಂಡ ಬೆಂಚ್ ಅಭಿಯಾನಕ್ಕೆ ಅಭೂತ ಪೂರ್ವ ಬೆಂಬಲ ಸೂಚಿಸಿದ ಎಲ್ಲ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಲವೇ ದಿನದಲ್ಲಿ 740 ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಕುಳಿತುಕೊಳ್ಳಲು ಬೆಂಚ್ ಮತ್ತು ಟೇಬಲ್ ನೀಡಿರುವುದು ತುಂಬಾ ಸಂತಸ ತಂದಿದೆ ಎಂದರು. ತಿಕೋಟಾ, ಬಬಲೇಶ್ವರ ಮತ್ತು ಚಡಚಣ ತಾಲೂಕಿನಲ್ಲಿ ಅತೀ ಹೆಚ್ಚು ಅಂಗನವಾಡಿಗಳಲ್ಲಿ ಕುರ್ಚಿ ಮತ್ತು ಟೇಬಲ್ ವಿತರಣೆ ಮಾಡಲಾಗಿದ್ದು, ಮುಂದಿನ ದಿನದಲ್ಲಿ ಉಳಿದ ಎಲ್ಲ ಅಂಗನವಾಡಿಗಳಿಗೂ ಸಾಮಗ್ರಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ಬೆಂಚ್ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು,ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಮತ್ತು ಸದಸ್ಯರು ಎಲ್ಲರೂ ತುಂಬಾ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರುಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌