ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್ 2ರಂದು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ ಸ್ಥಳ ಹಾಗೂ ಅಲ್ಲಿನ ಭದ್ರತೆ, ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಕೆಬಿಜೆಎನ್‍ಎಲ್ ಅಧಿಕ್ಷಕ ಅಭಿಯಂತರರಾದ ಬಸವರಾಜ್ ಅವರಿಗೆ ಸೂಚಿಸಿದರು.
ಮುಖ್ಯಮಂತ್ರಿಗಳು ಆಲಮಟ್ಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರಿಗೆ ಸೂಕ್ತ ಆಸನ ವ್ಯವಸ್ಥೆ, ಶಾಮಿಯಾನ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದ ಅವರು, ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಚ್.ಡಿ ಆನಂದ್ ಕುಮಾರ್ ಡಿವೈಎಸ್‍ಪಿ, ನಿಡಗುಂದಿಯ ಸಿಪಿಐ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.