ವಿಜಯಪುರ: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತೀ ಮುಖ್ಯವಾಗಿದೆ. ಪೌರ ಕಾರ್ಮಿಕರ ಹಿತ ಕಾಪಾಡಲು ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ ನೀಡಿದ್ದಾರೆ.
ನಗರಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಬೇಗಂ ತಲಾಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಪೌರ ಕಾರ್ಮಿಕರು ತಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ಪೌರ ಕಾರ್ಮಿಕ ಮಕ್ಕಳ ಕಲ್ಯಾಣ ನಿಧಿಯಲ್ಲಿ ವಿದ್ಯಾರ್ಥಿ ವೇತನ, ಲ್ಯಾಪಟ್ಯಾಪ್ ವಿತರಣೆ ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ, ಆರೋಗ್ಯ ತಪಾಸಣೆ ಸೇರಿದಂತೆ ಹಲವು ಕಾರ್ಯಕ್ರಮಗಳಿವೆ. ಇವುಗಳನ್ನು ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಮಾತನಾಡಿ, ಸಮಾಜದ ಸ್ವಾಸ್ಥ್ಯ ಕಾಪಾಡುವ ಪೌರ ಕಾರ್ಮಿಕರ ಸೇವೆ ಅತ್ಯಅಮೂಲ್ಯವಾಗಿದೆ. ಸ್ವಚ್ಛ ಸುಂದರ ನಗರವನ್ನಾಗಿಸಲು ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಬಹಳಷ್ಟು ಪೌರ ಕಾರ್ಮಿಕರ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತಿದೆ. ಪೌರ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತಿದೆ. ಪೌರ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಖಾಯಂ ನೇಮಕಾತಿ ಹೊಂದಿದ ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ಆದೇಶ ಪತ್ರ ಸಹ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಭತ್ಯೆ ರೂ. 7 ಸಾವಿರ ಚೆಕ್‍ನ್ನು ಸಾಂಕೇತಿಕವಾಗಿ ಪೌರ ಕಾರ್ಮಿಕರಿಗೆ ನೀಡಲಾಯಿತು.
ಮಹಾನಗರ ಪಾಲಿಕೆ ನೌಕರರ ಸಂಘದಿಂದ ಅತೀ ಹೆಚ್ಚು ಅಂಕ ಪಡೆದ ಪೌರ ಕಾರ್ಮಿಕರ ಮಕ್ಕಳನ್ನು ಇದೇ ವೇಳೆ ಸನ್ಮಾನಿಸಲಾಯಿತು. ನಾನಾ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನ ವಿತರಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.