ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಯುವಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪುರ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಗಟ್ಟಿಗೊಳ್ಳುವುದರೊಂದಿಗೆ ಮಾನಸಿಕ ಸದೃಢತೆ ಹೊಂದಲು ಯುವಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ನಗರದ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ 13 ತಾಲೂಕುಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಹೊಂದಿದ್ದು, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಕ್ರೀಡೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಬೆಳಸಿಕೊಳ್ಳಲು ಪ್ರತಿದಿನ ಕ್ರೀಡೆ ಯೋಗ ಪ್ರಾಣಾಯಾಮ, ಈಜು ಮುಂತಾದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತೀ ಅವಶ್ಯವಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರ ಸಂಘದ ಅಧ್ಯಕ್ಷ ಡಾ. ಜಾವೀದ ಜಮಾದಾರ ಮಾತನಾಡಿ, ಪ್ರತಿದಿನ ಕ್ರೀಡಾ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ಯುವಜನಾಂಗ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೇ ಸುಂದರ ಜೀವನ ರೂಪಿಸಿಕೊಳ್ಳಲು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಒಲವು ಹೊಂದಬೇಕು ಎಂದು ಹೇಳಿದರು.

ರಾಜ್ಯ ಯುವ ಪ್ರಶಸ್ತಿ ವಿಜೇತ ಅರವಿಂದ ಕೊಪ್ಪ ಮಾತನಾಡಿ, ಹೃದಯಘಾತ, ಕಿಡ್ನಿ ಸಮಸ್ಯೆ, ಅಧಿಕ ರಕ್ತದೊತ್ತಡ, ಮಧುಮೇಹ ಹಲವಾರು ರೋಗಗಳಿಂದ ಮುಕ್ತಿ ಹೊಂದಲು ನಾನಾ ಆಟೋಟಗಳಲ್ಲಿ ಭಾಗವಹಿಸಬೇಕು.  ಪೌಷ್ಠಿಕ ಆಹಾರವನ್ನು ಸೇವಿಸಿ ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.  ಕ್ರೀಡಾಪಟುಗಳಿಗೆ ಸೋಲು ಗೆಲವು ಮುಖ್ಯವಲ್ಲ.  ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ.  ಜಿಲ್ಲೆಯ ಕ್ರೀಡಾಪಟುಗಳು ಕ್ರೀಡಾ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಪ್ರಯೋಜನ ಪಡೆದುಕೊಂಡು ಉತ್ತಮ ಕ್ರೀಡಾಪಟುವಾಗಿ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಡಿಎಸ್ಎಸ್ ಮುಖಂಡ ಅಡಿವೆಪ್ಪ ಸಾಲಗಲ, ಎಂ. ವೈ. ಚಿಂಚಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌