ನೀರು ಪೂರೈಕೆ ವಿಳಂಬ ಸಹಿಸಲ್ಲ- 10 ದಿನಗಳಲ್ಲಿ ವಿಜಯಪುರ ನಗರಕ್ಕೆ ಸಮರ್ಪಕ ನೀರು ಪೂರೈಸಿ- ಡಿಸಿ ಟಿ. ಭೂಬಾಲನ ಖಡಕ್ ಸೂಚನೆ

ವಿಜಯಪುರ: ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುವ ವಿಳಂಬವನ್ನು ಸಹಿಸುವುದಿಲ್ಲ. ಯಾವುದೇ ತಾಂತ್ರಿಕ, ಸಿವಿಲ್ ಕಾಮಗಾರಿ ಸಮಸ್ಯೆ ನಿವಾರಿಸಿಕೊಂಡು 10 ದಿನಗಳೊಳಗಾಗಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಲೋಪ-ವಿಳಂಬ ಅನುಸರಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು.ವಾರ್ಡಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ವಾರ್ಡ ಅಭಿಯಂತರರು ತತ್Àಕ್ಷಣ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿ ಒದಗಿಸಿ ಪರಿಹಾರ ಕಂಡುಕೊಳ್ಳಬೇಕು. ನಗರದಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನಿಗದಿತ ಅವಧಿಯಲ್ಲಿ ನೀರು ಪೂರೈಸಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ವಿಳಂಬ ಧೋರಣೆ ಅನುಸರಿಸದೇ ನೀರಿನ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ-ದೂರು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗ¼ನ್ನು ಹೊಣೆಗಾರgನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಡಿಸಿ ಟಿ. ಭೂಬಾಲನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ವಿಜಯಪುರ ನಗರದ ಕೆಲವು ವಾರ್ಡಗಳಲ್ಲಿ ಹತ್ತು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ವಾರ್ಡಗಳ ನೀರಿನ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಕ್ರಮ ಕೈಗೊಂಡು ನಿಯಮಿತವಾಗಿ ನೀರು ಪೂರೈಕೆಗೆ ನೀಲನಕ್ಷೆ ಸಿದ್ಧಪಡಿಸಿಕೊಂಡು ಯುದ್ದೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿ, ಹತ್ತು ದಿನಗಳೊಳಗಾಗಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕುಡಿಯುವ ನೀರಿನ ಪೂರೈಕೆಗೆ ವಿದ್ಯುತ್ ಸಮಸ್ಯೆಯಾಗದಂತೆ ಜಾಗೃತ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.  ಯಾವುದೇ ತಾಂತ್ರಿಕ ತೊಡಕುಗಳ ಕುರಿತು ಅಧಿಕಾರಿಗಳು ಸಬೂಬು ನೀಡಬಾರದು. ಯಾವುದೇ ಸಮಸ್ಯೆ ಇದ್ದಲ್ಲಿ ತಕ್ಷಣ ಇತ್ಯರ್ಥಪಡಿಸಿಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ವಿಜಯಪುರ ನಗರದ ಕೆಲವು ವಾರ್ಡಗಳಲ್ಲಿ ನೀರಿನ ಸಮಸ್ಯೆ ಇದೆ.  ವಿದ್ಯುತ್ ಸಮಸ್ಯೆಯ ಹೊರತಾಗಿಯೂ ಸಮರ್ಪಕ ನೀರು ಪೂರೈಸಲು ತೊಡಕಾಗಿರುವ ಸಮಸ್ಯೆಗಳನ್ನು ಕಂಡು ಹಿಡಿದು ಪರಿಹರಿಸಬೇಕು.  ವಾರ್ಡ 31ರಲ್ಲಿ ಕಲ್ಯಾಣಿ ಮೂಲಕ ನೀರು ಪೂರೈಸುವ ಪರ್ಯಾಯ ಮಾರ್ಗಗಳ ಕಡೆಗೂ ಗಮನ ಹರಿಸಿಬೇಕು.  ನಗರದ ಕೆಲವು ವಾರ್ಡಗಳಲ್ಲಿ 10 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ.  ಈ ವಾರ್ಡಗಳಲ್ಲಿ ಪೈಪಲೈನ್ ಅಳವಡಿಸುವ ಇತರೆ ಕಾಮಗಾರಿ ನಿರ್ವಹಿಸುತ್ತಿರುವ ಸಂಸ್ಥೆಯು ವಿಳಂಬ ಮಾಡದೇ ಒಂದು ವಾರದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವಿಳಂಬವಾದಲ್ಲಿ ಬಿಲ್ ತಡೆ ಹಿಡಿಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.


ಜಲಮಂಡಳಿ, ಮಹಾನಗರ ಪಾಲಿಕೆ, ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳು, ಅಭಿಯಂತರನ್ನೊಳಗೊಂಡ ಕಾರ್ಯಪಡೆಯನ್ನು ಪ್ರತಿ ವಾರ್ಡಿಗೂ ರಚನೆ ಮಾಡಿಕೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡು, ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಪಡೆ ವಲಯವಾರು ಪರಿಶೀಲನೆ ನಡೆಸಿ, ಅವಧಿಯನುಸಾರ ನಿಯಮಿತವಾಗಿ ನೀರು ಪೂರೈಕೆಯಾಗುತ್ತಿರುವ ಕುರಿತು ಹಾಗೂ ನೀರು ಪೋಲಾಗುತ್ತಿರುವದನ್ನು ಪತ್ತೆ ಹಚ್ಚಿ, ನೀರು ಪೋಲಾಗುವುದನ್ನು ತಡೆಗಟ್ಟಬೇಕು. ನೀರು ಪೋಲು ಮಾಡದಂತೆ ಸಾರ್ವಜನಿಕರಲ್ಲಿಯೂ ಸಹ ಸೂಕ್ತ ತಿಳುವಳಿಕೆ ಮೂಡಿಸಬೇಕು. ಆದಾಗ್ಯೂ ನೀರು ಪೋಲು ಕಂಡು ಬಂದಲ್ಲಿ ದಂಡ ಹಾಕಿ ಎಚ್ಚರಿಕೆ ನೀಡಬೇಕು. ಸಾರ್ವಜನಿಕರು ಸಹ ಅವಶ್ಯಕತೆಗನುಸಾರವಾಗಿ ನೀರು ಬಳಕೆ ಮಾಡಿ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಡಿಸಿ ಮನವಿ ಮಾಡಿಕೊಂಡರು.

ಜಲ ಮಂಡಳಿಯಿಂದ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಬೇಕು.  ಕುಡಿಯುವ ನೀರಿನ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು.  ಕುಡಿಯುವ ನೀರಿನ ಕಾಮಗಾರಿಗೆ ತಾಂತ್ರಿಕ ಸೇರಿದಂತೆ ಯಾವುದೇ ಸಮಸ್ಯೆಗೆ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸಲ್ಲಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಕುಡಿಯುವ ನೀರಿನ ಕಾಮಗಾರಿ ಅನುಷ್ಠಾನಕ್ಕೆ ಕಾರ್ಯಪ್ರವೃತ್ತರಾಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ ಸಹಿಸುವುದಿಲ್ಲ. ಜಲಮಂಡಳಿಯಿಂದ ನಡೆಯುವ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡುಬೇಕು. ಬಾಕಿ ಕಾಮಗಾರಿ, ತಗಲುವ ವೆಚ್ಚ ಕುರಿತು ಮಾಹಿತಿ ಒದಗಿಸಬೇಕು.  ತಕ್ಷಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾಮಗಾರಿಗಳು ಪೂರ್ಣಗೊಂಡ ನಂತರ ಅಚ್ಚುಕಟ್ಟು ನಿರ್ವಹಣೆ ಮಾಡಬೇಕು.  ನಿರ್ವಹಣೆ ಹಾಗೂ ನಿರ್ಣಯ ತೆಗೆದುಕೊಳ್ಳುವಲ್ಲಿ ಯಾವುದೇ ಗೊಂದಲ ಸೃಷ್ಟಿಸಿಕೊಳ್ಳದೇ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಟಿ. ಭೂಬಾಲನ  ಅವರು ಸೂಚನೆ ನೀಡಿದರು.

ಈ ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಭಿಯಂತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌