ವಿಜಯಪುರ: ಸಮರ್ಪಕ ವಿದ್ಯುತ್ ಪೂರೈಸಬೇಕು ಮತ್ತು ಕಾಲುವೆಗಳಿಗೆ ಸರಿಯಾಗಿ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ. ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ್ ಕೋಕರೆ ಅವರ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೇರಿದಂತೆ ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬರ ಹಿನ್ನೆಲೆಯಲ್ಲಿ ಬೆಳೆಗಳು ನಷ್ಟವಾಗುತ್ತಿವೆ. ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಲವು ರೈತರು ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.
ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರಕಾರ ಕೂಡಲೇ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ಅವರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಟಿ. ಭೂಬಾಲನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಬಳಿಯೂ ಸಮಸ್ಯೆಗೆ ಸ್ಪಂದಿಸುವಂತೆ ರೈತರು ಮನವಿ ಮಾಡಿದರು.
ಅಷ್ಟೇ ಅಲ್ಲ, ಹೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಅವರನ್ನೂ ಭೇಟಿ ಮಾಡಿದ ರೈತರು ಕೂಡಲೇ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಕಾರ್ಯದರ್ಶಿ ಪುಟ್ಟಸ್ವಾಮಿ, ಮುಖಂಡರಾದ ಗುರುನಾಥ್ ಬಗಲಿ, ಎಸ್. ಪಿ. ಬಿರಾದಾರ ಕಡ್ಲೇವಾಡ, ಮುಂತಾದವರು ಉಪಸ್ಥಿತರಿದ್ದರು.