ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ- ಅಕ್ರಮ ತಡೆಯದಿದ್ದರೆ ಕಠಿಣ ಕ್ರಮ- ಸಚಿವ ಎಂ. ಬಿ. ಪಾಟೀಲ ಎಚ್ಚರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಗಂಭೀರವಾಗಿ ತೆಗೆದುಕೊಳ್ಳಬೇಕು. ನೀರಿನ ವಿಷಯದಲ್ಲಿ ಯಾವುದೇ ನೆಪ ಸಹಿಸುವುದಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೀರಿನ ಸಮಸ್ಯೆ ಇರುವ ಕಡೆ ಬೊರವೆಲ್‍ಗಳನ್ನು ಕೊರೆಯಿಸಲು ಕ್ರಮ ಕೈಗೊಳ್ಳಬೇಕು.  ಬೊರವೆಲ್ ಕೊರೆಸುವ ಪ್ರಕ್ರಿಯೆ ವಿಳಂಬವಾದರೆ ಕೂಡಲೇ ಟ್ಯಾಂಕರ್ ಮೂಲಕ ಕುಡಿಯಲು ನೀರು ಪೂರೈಸಬೇಕು ಎಂದು ಅವರು ಖಡಕ್ ಸೂಚನೆ ನೀಡಿದರು.

ವಿಜಯಪುರದಲ್ಲಿ ಸಚಿವ ಎಂ. ಬಿ. ಪಾಟೀಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ಗ್ರಾಮೀಣ ಭಾಗದಲ್ಲಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಸಭೆ ನಡೆಸಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಬರಗಾಲದಂತಹ ಕ್ಲೀಷ್ಟಕರ್ ಪರಿಸ್ಥಿತಿಯಲ್ಲಿ ಜನರಿಗೆ ಕುಡಿಯುವ ನೀರು, ವಿದ್ಯುತ್, ಉದ್ಯೋಗದ ಕೊರತೆಯಾಗದಂತೆ ನಿಗಾ ವಹಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು.  ಗ್ರಾಮೀಣ ಭಾಗದಲ್ಲಿ  ನರೇಗಾ ಯೋಜನೆಯಡಿ ಸ್ಥಳೀಯವಾಗಿ ಕೆಲಸ ಒದಗಿಸುವ ಮೂಲಕ ಜನರ ಬದುಕಿಗೆ ಆಸರೆ ಒದಗಿಸಬೇಕು ಎಂದು  ಹೇಳಿದರು.

ಸಾರ್ವಜನಿಕರಿಂದ ಸಲ್ಲಿಕೆಯಾದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸ್ಥಳದಲ್ಲೇ ಸೂಚನೆ ನೀಡಿದ ಸಚಿವರು, ನುಡಿದಂತೆ ನಡೆಯುತ್ತಿರುವ ಸರಕಾರ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಹೆಚ್ಚಿನ ಜನರಿಗೆ ಲಾಭ ದೊರಕಿಸಲು ಪ್ರಯತ್ನಿಸಬೇಕು.  ಗ್ಯಾರಂಟಿ ಯೋಜನೆಗಳಲ್ಲಿ ಅರ್ಹ ಎಲ್ಲ ಫಲಾನುಭವಿಗಳು ಲಾಭ ದೊರೆಯುವಂತೆ ನೋಡಿಕೊಳ್ಳಬೇಕು.  ಸರಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಡಿ ಶೇ. 100 ರಷ್ಟು ಫಲಾನುಭವಿಗಳು ನೋಂದಾಯಿಸಿಕೊಳ್ಳುವಂತೆ ನೋಡಿಕೊಳ್ಳಬೇಕು.  ಯೋಜನೆಗಳಡಿ ನೊಂದಣಿಗೆ ಬಾಕಿ ಉಳಿದ ಫಲಾನುಭವಿಗಳ  ನಿಖರವಾದ ಮಾಹಿತಿ ಹಾಗೂ ಬಾಕಿ ಉಳಿಯಲು ಇರುವ ಕಾರಣ ಕುರಿತಂತೆ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.  ಈ ಬರಗಾಲದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಅನುಷ್ಟಾನಗೊಳಿಸಬೇಕು ಎಂದು ಹೇಳಿದರು.

ಜನತಾ ದರ್ಶನ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಬೇಕು. ಜನರ ಕುಂದು ಕೊರತೆಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ, ಪರಿಹಾರ ಒದಗಿಸಬೇಕು.ಈ ನಿಟ್ಟಿನಲ್ಲಿ ಅಧಿಕಾರಿಗಳು ಪೂರ್ವಸಿದ್ಧತೆ ಮಾಡಿಕೊಂಡಿರಬೇಕು. ಈ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಗ್ರಾಮೀಣ ಮಟ್ಟದ ಜನರ ಸಮಸ್ಯೆಗಳ ಆಲಿಕೆಗೆ ತಾಲೂಕಾ ಮಟ್ಟದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಸ್ಥಳೀಯ ಶಾಸಕರೊಂದಿಗೆ ಜನತಾ ದರ್ಶನ ಏರ್ಪಡಿಸಬೇಕು. ಇದರಿಂದ ಸಾಕಷ್ಟು ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಜನರ ಸಮಸ್ಯೆಗೆ ಪರಿಹಾರ ದೊರೆತಾಗ ಜನತಾ ದರ್ಶನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಪುನರ್ವಸತಿ ಕೇಂದ್ರಗಳಲ್ಲಿನ ನಿವೇಶನಗಳನ್ನು ನೌಕರರೊಬ್ಬರು ಬೇರೆಯವರಿಗೆ ಹಂಚಿಕೆ ಮಾಡಿ ಅಕ್ರಮ ಎಸಗಿದ್ದು, ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.  ಜೈಲಿನಲ್ಲಿದ್ದ ಅವರು ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದು, ಮತ್ತದೆ ಛಾಳಿ ಮುಂದುವರೆಸಿದ್ದಾರೆ.  ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.  ಈ ನಿಟ್ಟಿನಲ್ಲಿ ಸಭೆಯೊಂದನ್ನು ನಡೆಸುವುದಾಗಿ ಎಂ. ಬಿ. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ,ಸೆಪ್ಟಂಬರ್ 25 ರಂದು ನಡೆದ ಮೊದಲನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ 709 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 563 ಅರ್ಜಿಗಳನ್ನು ಒಂದು ತಿಂಗಳೊಳಗಾಗಿ ವಿಲೇವಾರಿ ಮಾಡಲಾಗಿದೆ. 140 ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಬಾಕಿ ಇದ್ದು, ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿವೆ. ಈ ಅರ್ಜಿಗಳಿಗೆ ಸಂಬಂಧಿಸಿದಂತೆ 177 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿದ್ದು, ಈ ಅರ್ಜಿಗಳ ಪೈಕಿ 145 ಅರ್ಜಿಗಳನ್ನು ವಿಲೇ ಮಾಡಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೋಲಿಸ್ ಇಲಾಖೆ, ಹೆಸ್ಕಾಂ ಇಲಾಖೆಯ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಬಾಕಿ ಅರ್ಜಿಗಳ ವಿಲೇವಾರಿಗಾಗಿ ಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ ಪರಿಶೀಲನೆ ಮಾಡಿ ಆದ್ಯತಾನುಸಾರ ವಿಲೇವಾರಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿಸಾರ್ವಜನಿಕರಿಂದ ಸಲ್ಲಿಕೆಯಾದ ನಾನಾ ಸಮಸ್ಯೆಗಳ ಪರಿಹಾರಕ್ಕೆ ಸ್ಥಳದಲ್ಲಿಯೇ ಸಚಿವರು ಸೂಚನೆ‌ ನೀಡಿದರು.

ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ, ಬೆಳೆ ಹಾನಿ, ವಿಕಲಚೇತರನಿಗೆ ಆಶ್ರಯ ಮನೆ, ಕೃಷಿ ಹೊಂಡ ನಿರ್ಮಾಣ, ಭೂದಾಖಲೆಗಳ ಸಮಸ್ಯೆ, ಕಾಲುವೆಗೆ ನೀರು ಹರಿಸುವಿಕೆ, ವಿದ್ಯುತ್, ಬಸ್ಸಿನ ವ್ಯವಸ್ಥೆ,  ಕಂದಾಯ ಇಲಾಖೆಗೆ ಸಂಬಂಧಿಸಿದ ದೂರುಗಳು, ಆಸ್ತಿ ನೊಂದಣಿ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ, ಪರಿಹಾರಕ್ಕೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಧೋಂಡಿಬಾ ಕಟಕದೊಂಡ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲ್ಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌