ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷವಾಗುತ್ತದೆ- ಪತ್ರಕರ್ತ ಕೆ. ಎನ್. ರಮೇಶ

ವಿಜಯಪುರ: ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ಉಂಟಾಗುತ್ತದೆ ಎಂದು ಹಿರಿಯ ಪತ್ರಕರ್ತ ಕೆ. ಎನ್. ರಮೇಶ ಹೇಳಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ.  ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ.  ಪ್ರಶಸ್ತಿಯನ್ನು ಕೇಳಿ ಪಡೆಯುವಂತಾಗಬಾರದು.  ಅದು ಸಾಧನೆ ಅರಸಿ ಬಂದರೆ ಹೆಚ್ಚು ಸೂಕ್ತವಾಗಿರುತ್ತದೆ ಎಂದು ಹೇಳಿದರು.

ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಭಂಡಾರಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ರಾಜ್ಯ ಸರಕಾರ ನನಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ಸಂತಸವನ್ನುಂಟು ಮಾಡಿದೆ.  ಆದರೆ, ಈ ಪ್ರಶಸ್ತಿ ಲಭಿಸಿದ್ದಕ್ಕೆ ಕೆಲವರು ಟೀಕೆ ಮಾಡಿದ್ದು ನೋವನ್ನುಂಟು ಮಾಡಿದೆ ಎಂದು ಹೇಳಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಸೀತಾರಾಮ ಕುಲಕರ್ಣಿ, ಷಡಕ್ಷರಿ ಕಂಪೂನವರ ಸನ್ಮಾನ ಸ್ವೀಕರಿಸಿ, ತಮಗೆ ಗೌರವ ಸನ್ಮಾನ ನೀಡಿದ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಧನ್ಯವಾದ ಹೇಳಿದರು.

ಸನ್ಮಾನ ಕಾರ್ಯಕ್ರಮದ ನಂತರ ಕಾರ್ಯನಿರತ ಪತ್ರಕರ್ತರು ಗ್ರುಪ್ ಫೋಟೋ ತೆಗೆಸಿಕೊಂಡರು

ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಮುದ್ರಣ ಮತ್ತು ದೃಶ್ಯ ಮಾಧ್ಯಮದ ಎರಡನ್ನೂ ಪರಿಗಣಿಸುತ್ತಿದೆ.  ಆದರೆ, ವಯೋಮಿತಿಯಲ್ಲಿಯೂ ಸಡಿಲಿಕೆಯಾಗಬೇಕು ಎಂದು ಹೇಳಿದರು.

ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಸಂಘದ ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ. ಕೆ. ಕುಲಕರ್ಣಿ, ಐಎಫ್ ಡಬ್ಲ್ಯೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ವಿ. ಶಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಗುರುರಾಜ ಗದ್ದನಕೇರಿ, ಸದಸ್ಯರಾದ ಗೋಪಾಲ ಕಣಿಮನಿ, ಇಸ್ಮಾಯಿಲ್ ಮುಲ್ಲಾ, ಮಾಧವರಾವ್ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

ಸಂಘದ ಸಲಹಾ ಸಮಿತಿ ಸದಸ್ಯ ಅಶೋಕ ಯಡಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವೇಂದ್ರ ಹೆಳವರ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌