ವಿಜಯಪುರ: ಅನಿಮಿಯಾ, ಅಪೌಷ್ಠಿಕತೆ ಹಾಗೂ ಮಕ್ಕಳ ದೈಹಿಕ ಬೆಳವಣಿಗೆ ಕುರಿತು ತಾಯಂದಿರು ಮತ್ತು ಪೋಷಕರು ಹೆಚ್ಚು ಜಾಗೃತರಾಗಿರಬೇಕು. ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಬಾಲಕರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಬಾಲಕರ ಪದವಿ ಪೂರ್ವ ಮಹಾವಿದ್ಯಾಲಯದ ಸರ್.ಎಂ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಶ್ಚಾತ್ಯ ಆಹಾರ ಪದ್ದತಿಯನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಕೊಳ್ಳದೇ, ದೇಶಿಯ ಹಾಗೂ ಸ್ಥಳೀಯವಾಗಿ ಸಿಗುವ ಹಣ್ಣು ತರಕಾರಿ ಹಾಗೂ ಧಾನ್ಯಗಳನ್ನು ಯಥೇಚ್ಛವಾಗಿ ಬಳಕೆ ಮಾಡಬೇಕು. ಪೌಷ್ಟಿಕಯುಕ್ತ ಆಹಾರ ಹಾಗೂ ಅವುಗಳ ನಿಯಮಿತವಾಗಿ ಸೇವಿಸಬೇಕು. ಕಬ್ಬಿಣಾಂಶ ಕೊರತೆಯಿಂದ ಬರುವ ಕಾಯಿಲೆಗಳ ಲಕ್ಷಣಗಳು ಹಾಗೂ ಅವುಗಳನ್ನು ತಡೆಗಟ್ಟುವ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಆರೋಗ್ಯ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ರಕ್ತಹೀನತೆಯನ್ನು ನಿರ್ಲಕ್ಷಿಸಿದರೆ ಅನೇಕ ಆರೋಗ್ಯ ಸಮಸ್ಯೆ ಉದ್ಭವಿಸುತ್ತವೆ. ರಕ್ತಹೀನತೆಯಿಂದ ಮಕ್ಕಳ ಶಾರೀರಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆರೋಗ್ಯ ಇಲಾಖೆಯ ವೈದ್ಯಕೀಯ ತಂಡ ಅನಿಮಿಯಾ ಕುರಿತು ಅರಿವು ಮೂಡಿಸಲು, ತಪಾಸಣೆ ನಡೆಸಲು ಹಾಗೂ ಚಿಕಿತ್ಸೆ ನೀಡಲು ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ. ಕೆ. ಹೊಸಮನಿ ಹೇಳಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಕೆ. ಡಿ. ಗುಂಡಬಾವಡಿ ಮಾತನಾಡಿ, ಜಾಗತಿಕವಾಗಿ ಶೇ. 45 ಜನರು ಅನಿಮಿಯಾದಿಂದ ಬಳಲುತ್ತಿದ್ದಾರೆ. ಅದರಲ್ಲಿ ಶೇ. 50 ರಷ್ಟು ಬಾಣಂತಿಯರು, ಶೇ. 5ರಷ್ಟು 6 ವರ್ಷದೊಳಗಿನ ಮಕ್ಕಳು ಅನಿಮಿಯಾದಿಂದ (ರಕ್ತಹೀನತೆ) ಬಳಲುತ್ತಿದ್ದಾರೆ. ಜಿಲ್ಲೆಯಲ್ಲಿ 243 ಕಾಲೇಜುಗಳಲ್ಲಿ 68,280 ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷೆ ಹಾಗೂ ಚಿಕಿತ್ಸಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಿ. ಬಿ. ಗಂಗನಳ್ಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ರಕ್ತಹೀನತೆ ಪರೀಕ್ಷೆ ಮಾಡುವುದರಿಂದ ಅಪೌಷ್ಟಿಕತೆ ಗುರುತಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಡಿಎಲ್ಓ ಡಾ. ಸಂಪತ ಗುಣಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡ್ಡಮನಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಎಂ. ಕೊಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್. ಆರ್. ಬಾಗವಾನ, ಮಹಾದೇವ ನಿಲಂಗಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಕಾಲೇಜಿನ ಉಪನ್ಯಾಸಕರು, ಆರೋಗ್ಯ ಇಲಾಖೆಯ ಆರ್.ಬಿ.ಎಸ್.ಕೆ ವೈದ್ಯಾಧಿಕಾರಿ ತಂಡ, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.