ಬಾಲ್ಯವಿವಾಹ ತಡೆಗೆ ವ್ಯಾಪಕ ಜಾಗೃತಿ, ವಿವಾಹ ಪೂರ್ವ ಪತ್ತೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರ್ವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ 2023-24ನೇ ವರ್ಷದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು.  ಬಾಲ್ಯ ವಿವಾಹವಾಗದಂತೆ ಆಶಾ- ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ಥಳೀಯ ಆಡಳಿತ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹಗಳನ್ನು ಪತ್ತೆ ಹಚ್ಚಿ, ಸಾಧ್ಯವಾದಷ್ಟು ಬಾಲ್ಯ ವಿವಾಹವಾಗುವ ಮೊದಲೇ ತಡೆಗಟ್ಟಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ವಿಜಯಪುರ ಡಿಸಿ ಟಿ. ಭೂಬಾಲನ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ, ಪರಿಶೀಲನಾ ಸಭೆಯ ನಡೆಯಿತು

ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಾಲ್ಯವಿವಾಹಕ್ಕೆ ಪ್ರೊತ್ಸಾಹ ನೀಡುವವರ ಮೇಲೆ ಪ್ರಕರಣ ದಾಖಲಿಸಬೇಕು. ಬಾಲ್ಯವಿವಾಹ ನಿಷೇಧ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಇದರಿಂದ ಮಕ್ಕಳ ಭವಿಷ್ಯ ಹಾಳಾಗುವ ಕುರಿತು ಜನರಲ್ಲಿ ತಿಳುವಳಿಕೆ ನೀಡುವ ಮೂಲಕ ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸುವಂತೆ ಸೂಚಿಸಿದ ಅವರು, ಬಾಲ್ಯವಿವಾಹ ನಡೆಯುವ ಕುರಿತು ನೆರೆಹೊರೆಯವರು, ಸಾರ್ವಜನಿಕರು ಸಹ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವ ಮೂಲಕ ಬಾಲ್ಯವಿವಾಹ ತಡೆಗಟ್ಟಲು ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ 2005ರನ್ವಯ ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಪ್ರಕರಣಗಳನ್ನು ದಾಖಲಿಸಿ ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ, ತಾತ್ಕಾಲಿಕವಾಗಿ ಆಶ್ರಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

 

ಕುಟುಂಬದಿಂದ ನಿರ್ಲಕ್ಷಿಸಲಾದವರು, ಕೌಟುಂಬಿಕ ಕಲಹ, ವಿವಾಹ ವಿಚ್ಛೇಧನ, ಪೊಕ್ಸೊ ಪ್ರಕರಣ ಸೇರಿದಂತೆ ಕೌಟುಂಬಿಕ ದೌರ್ಜನ್ಯಕ್ಕೊಳಗಾಗಿ ಶಕ್ತಿ ಸದನ ಸ್ವಾಧಾರ ಗೃಹ ಯೋಜನೆಯಡಿ ಆಶ್ರಯ ಪಡೆದ 1580 ಮಹಿಳೆಯರು ಮತ್ತು 273 ಮಕ್ಕಳಿಗೆ ಆಹಾರ, ಶಿಕ್ಷಣ, ಸಮಾಲೋಚನೆ, ವೈದ್ಯಕೀಯ ಕುಟುಂಬಕ್ಕೆ ಪುನರ್‍ಮಿಲನ್ ಮತ್ತು ಕಾನೂನಿನ ನೆರವಿನೊಂದಿಗೆ ಅವರ ನೈಪುಣ್ಯತೆಯನುಸಾರವಾಗಿ ಸ್ವಯಂ ಉದ್ಯೋಗ ತರಬೇತಿ ನೀಡುವ ಮೂಲಕ ಅವರನ್ನು ಸ್ವಾವಲಂಬಿಯನ್ನಾಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಜಿಲ್ಲೆಯ ವಿಜಯಪುರ, ಸಿಂದಗಿ ಬಸವನ ಬಾಗೇವಾಡಿಯಲ್ಲಿನ ಬಾಲಕಿಯರ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವಸತಿ ನಿಲಯಗಳಲ್ಲಿ ಅಳವಡಿಸಲಾದ ಸಿಸಿಟಿವಿಗಳ ಸ್ಥಿತಿಗತಿ ಕುರಿತು ಪರಿಶೀಲನಹೆ ನಡೆಸಬೇಕು. ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಂಗಳಲ್ಲಿ ಒಂದು ಬಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹಗಲು ಮತ್ತು ರಾತ್ರಿ ಮಹಿಳಾ ವಾರ್ಡಗಳು ಕಾರ್ಯನಿರತವಾಗಿರುವುದನ್ನು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ವಿಜಯಪುರದ ಬಾಲಕಿಯರ ಬಾಲಮಂದಿರದ ಸುಧಾರಣೆ ಕ್ರಮ ಕೈಗೊಂಡು ಬಾಲಮಂದಿರದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಮಾತೃವಂದನಾ ಯೋಜನೆಯಡಿ ನಿಗದಿತ ಪ್ರಗತಿ ಸಾಧಿಸಿ ಗುರಿ ಹೆಚ್ಚಿಸಬೇಕು. ಗರ್ಭೀಣಿ ಮಹಿಳೆಯರಿಗೆ ಸಮರ್ಪಕವಾಗಿ ಪೌಷ್ಠಿಕಾಂಶ ಆಹಾರ ಒದಗಿಸಬೇಕು. ಅಂಗನವಾಡಿ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅವರ ಜವಾಬ್ದಾರಿಗಳ ಕುರಿತು ತರಬೇತಿ ಒದಗಿಸಬೇಕು. ಜಿಲ್ಲೆಯಲ್ಲಿ ಶಾಲೆಯಿಂದ ಹೊರುಗಳಿದ ಹೆಣ್ಣು ಮಕ್ಕಳ ಸಮೀಕ್ಷೆ ನಡೆಸಬೇಕು. ಆ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆ ತರಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಅಪಹರಣ, ಲೈಂಗಿಕ ಹಲ್ಲೆ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕ್ಕೊಳಗಾದವರನ್ನು ಕೌನ್ಸೆಲಿಂಗ ಪ್ರಕ್ರಿಯೆಗೊಳಪಡಿಸಿ ಮನೋಸ್ಥೈರ್ಯ ಹೆಚ್ಚಿಸಬೇಕು. ಈ ಸಖಿ ಕೇಂದ್ರಗಳು 24/7 ಕಾರ್ಯನಿರ್ವಹಿಸಬೇಕು. ಕೇಂದ್ರದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ನಿರ್ವಹಣೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚಿಸಿ, ಕೇಂದ್ರದಲ್ಲಿ ಡಿ ಗ್ರೂಪ್ ನೌಕರರ ನಿಯೋಜನೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಕೌಟುಂಬಿಕ ದೌಜನ್ಯಕ್ಕೊಳಗಾದ ಮಹಿಳೆಯರಿಗೆ ಕೌನ್ಸೆಲಿಂಗ್ ನಡೆಸಬೇಕು.ಮೊದಲು ಪ್ರಕರಣ ದಾಖಲಿಸಿ ಪ್ರಕರಣ ವರದಿಯಾದ ನಂತರ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ಒದಗಿಸಬೇಕು. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೊತ್ಸಾಹ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ ಕುಂದರ್ ಹೇಳಿದರು.

ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ. ಬಿ. ಕುಂಬಾರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌