ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಡಿ. 16 ಮತ್ತು 17 ರಂದು ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ನಡೆಸುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ. 16 ರಂದು ಸರkeರಿ ಬಾಲಕರ ಪಿಯು ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ 59 ಅಭ್ಯರ್ಥಿಗಳು ಹಾಗೂ ಡಿ. 17 ರಂದು ನಗರದ ಸರಕಾರಿ ಬಾಲಕರ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಕಿರಿಯ ಪದವಿಪೂರ್ವ ಕಾಲೇಜ್ ಹಾಗೂ ಪಿಡಿಜೆ ಹೈಸ್ಕೂಲ್ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10ರಿಂದ 11-30ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಹಾಗೂ ಅಪರಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಜರುಗುವ ಪತ್ರಿಕೆ-2 ಸಾಮಾನ್ಯ ಕನ್ನಡ, ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆಗೆ 227 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ.
ಈ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ರವಾನೆ, ಪರೀಕ್ಷಾ ಕೇಂದ್ರದಲ್ಲಿನ ಅಗತ್ಯ ಸಿದ್ಧತೆ ಕುರಿತು ಪರಿಶೀಲನೆ ನಡೆಸಬೇಕು. ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕೈಗೊಳ್ಳಬೇಕು. ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಈ ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಎನ್. ಎಚ್. ನಾಗೂರ, ಶಿಕ್ಷಣಾಧಿಕಾರಿ ಅಶೋಕ ಲಿಮಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪುರ, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.