ವಿಜಯಪುರ: ಐತಿಹಾಸಿಕ ಸ್ಮಾರಕಗಳನ್ನೊಳಗೊಂಡ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ರೋಡ್ ಮ್ಯಾಪ್ ಸಿದ್ಧಪಡಿಸಬೇಕು. ಪಾರಂಪರಿಕ ತಾಣಗಳಿಗೆ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪಾರಂಪರಿಕ ತಾಣಗಳ ರಕ್ಷಣೆ ಹಾಗೂ ಸ್ವಚ್ಛತೆಯೊಂದಿಗೆ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ವಹಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಪಾರಂಪರಿಕ, ಐತಿಹಾಸಿಕ ಸ್ಮಾರಕಗಳ ರಕ್ಷಣೆಯಾಗಬೇಕು. ಕೋಟೆಗೋಡೆಗಳ ಸ್ವಚ್ಛತೆ ಕ್ರಮ ವಹಿಸಬೇಕು. ನಗರದ ಸ್ಮಾರಕಗಳ ಹತ್ತಿರ ಪ್ರವಾಸಿಗರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಗಗನ್ ಮಹಲ್ ಆವರಣದ ಕಂದಕ್‍ದ ನೀರನ್ನು ಸ್ವಚ್ಚಗೊಳಿಸಿ ಕಂದಕ್‍ದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ನಗರದಲ್ಲಿನ ಐತಿಹಾಸಿಕ ಭಾವಿಗಳ ನೀರನ್ನು ಗೃಹ ಬಳಕೆಗೆ ಉಪಯೋಗ ಮಾಡಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಇದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಜನವರಿ ಮಧ್ಯದಲ್ಲಿ ಅಥವಾ ಕೊನೆ ವಾರದಲ್ಲಿ ಖುದ್ದಾಗಿ ನಾನು ಸಿಟಿ ಟೂರ್ ಮಾಡಿ, ಈಗಾಗಲೇ ಸೂಚಿಸಿದ ಸ್ಮಾರಕಗಳ ಸ್ವಚ್ಛತೆ, ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸುತ್ತೇನೆ ಎಂದು ಅವರು ಹೇಳಿದರು.
ಪ್ರತಿ ತಿಂಗಳಿಗೊಮ್ಮೆ ನಗರದ ಐತಿಹಾಸಿಕ ತಾಣಗಳ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ಜಿಲ್ಲೆಯ ತಿಂಡಿ-ತಿನಿಸುಗಳ ಮೇಳ ಆಯೋಜನೆ ಮಾಡುವ ಮೂಲಕ ಸ್ಥಳೀಯ ಆಹಾರಕ್ಕೆ ಪ್ರೊತ್ಸಾಹ ನೀಡಬೇಕು. ನಮ್ಮ ಸಾಂಸ್ಕøತಿಕ ಬಿಂಬವನ್ನು ಮೇಳಗಳ ಮೂಲಕ ಪ್ರಚುರಪಡಿಸಬೇಕು ಎಂದು ಹೇಳಿದರು.
ಜಿಲ್ಲೆಯ ಸೈಕ್ಲಿಷ್ಟಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿಗೆ ವೇಗ ನೀಡಿ, ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ಬೇಸಿಗೆ ಬರುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಟಕ್ಕಳಕಿ, ಹೂವಿನಹಿಪ್ಪರಗಿ, ಸಂಕನಾಳ, ದಿಂಡವಾರ ಬ್ಯಾಂಚ್ ಕೆನಾಲ್‍ಗಳ ಮೂಲಕ 19 ಕೆರೆಗಳ ನೀರು ತುಂಬುವ ಕಾಮಗಾರಿಗಳಿಗೆ ವೇಗ ನೀಡಿ, ಕಾಮಗಾರಿ ಪೂರ್ಣಗೊಳಿಸಬೇಕು. ಯಾವುದೇ ಸಮಸ್ಯೆ, ಅಡೆ-ತಡೆ ಉದ್ಭವವಾದರೆ ಜಿಲ್ಲಾಡಳಿತದ ಸಹಾಯ ಪಡೆದುಕೊಂಡು ಸಮಸ್ಯೆ ನಿವಾರಣೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವ್ಯಾಪ್ತಿಯಲ್ಲಿರುವ ಜಿಲ್ಲೆಯ ಅಂಗನವಾಡಿ ಕೇಂದ್ರಗಳನ್ನು ಲೋಹಗಾಂವನಲ್ಲಿರುವ ಅಂಗನವಾಡಿ ಕೇಂದ್ರದ ಮಾದರಿಯಲ್ಲಿ ಅಭಿವೃದ್ದಿಪಡಿಸಿ, ಮಕ್ಕಳಿಗೆ ಆಟದೊಂದಿಗೆ ಪಾಠಕ್ಕೆ ಒತ್ತು ನೀಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರಮ ವಹಿಸಬೇಕು. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಡಿ.27,28,29 ರಂದು ಮೂರು ದಿನಗಳ ಕಾಲ ಅಭಿಯಾನ ಹಮ್ಮಿಕೊಂಡು ಗೃಹಲಕ್ಷ್ಮಿ ಯೋಜನೆ ನೊಂದಣಿ, ಫಲಾನುಭವಿಗಳ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ್ ಸಮಸ್ಯೆಗಳ ನಿವಾರಣೆಗೆ ಹಮ್ಮಿಕೊಂಡ ಅಭಿಯಾನದಲ್ಲಿ 17 ಸಾವಿರ ನಿವಾರಣೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿಯೇ 5ನೇ ಸ್ಥಾನದಲ್ಲಿರುವ ಪದವಿಪೂರ್ವ ಶಿಕ್ಷಣ 3ನೇ ಸ್ಥಾನಕ್ಕೆ ಬರಲು ಬೋಧನಾ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗುಣಾತ್ಮಕ ಶಿಕ್ಷಣದೊಂದಿಗೆ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟಿರಿಕ್ ನಂತರದ ವಸತಿ ನಿಲಯಗಳ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೇಡಿಕೆ ಇದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಅವರು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಸಲ್ಲಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯೀಕರಣ ಅಭಿವೃದ್ದಿಪಡಿಸಿ ಸಾಯಿನ್ಸ್ ಮ್ಯೂಸಿಯಂ ನಿರ್ಮಾಣ ಮಾಡಿ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆ ಹಮ್ಮಿಕೊಳ್ಳುವ ಕುರಿತು ಕೂಡಲೇ ಕಾರ್ಯಪ್ರವೃತ್ತರಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಜಿಲ್ಲೆಯಲ್ಲಿರುವ ಸರ್ಕಾರಿ ಜಮೀನು ಗುರುತಿಸಬೇಕು. ಸರ್ಕಾರಿ ಜಮೀನು-ಕೆರೆಗಳು ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ,. ಜಿಲ್ಲೆಯ ಎಲ್ಲ ತಾಲೂಕಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುಂಬರುವ ಕೆಡಿಪಿ ಸಭೆಯೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಡಿ.26 ರಿಂದ ಆರಂಭಗೊಂಡಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಅರ್ಹರನ್ನು ಗುರುತಿಸಿ ಯೋಜನೆ ಲಾಭ ದೊರಕಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತೆ ಸೂಕ್ತ ಜಾಗೃತಿ ಮೂಡಿಸಬೇಕು. ಕೃಷಿ ಕಲ್ಯಾಣಕ್ಕಾಗಿ ಅಭಿಯಾನ ಕೈಗೊಳ್ಳಬೇಕು. ತೋಟಗಾರಿಕೆ ರೈತರಿಗೆ ಉತ್ತೇಜನ ನೀಡಲು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಉತ್ತೇಜನ ನೀಡಬೇಕು. ರೈತರ ಆದಾಯ ದ್ವಿಗುಣಕ್ಕೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಲ್ಲಿ ಸೂಕ್ತ ಅರಿವು ಮೂಡಿಸಬೇಕು. ಶಾಲಾ ಮಕ್ಕಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸ್ಥಳಗಳಲ್ಲಿ ಬಸ್ ವ್ಯವಸ್ಥೆಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೈನುಗಾರಿಕೆಗೆ ವಿಫುಲ ಅವಕಾಶವಿರುವುದರಿಂದ ಈ ಅವಕಾಶವನ್ನು ಬಳಸಿಕೊಂಡು ಕೃಷಿಯೊಂದಿಗೆ ಹೈನುಗಾರಿಕೆಗೆ ರೈತರು ಒತ್ತು ನೀಡಲು ಸಂಬಂಧಿಸಿದ ಅಧಿಕಾರಿಗಳು ನಬಾರ್ಡ್ ಹಾಗೂ ಕೆಎಂಎಫ್‍ದಿಂದ ದೊರೆಯುವ ಸೌಲಭ್ಯಗಳ ಕುರಿತು ಸೂಕ್ತ ಮಾಹಿತಿ ನೀಡಿ ಹೈನುಗಾರಿಕೆ ಉತ್ತೇಜನ ನೀಡಬೇಕು. ಜಿಲ್ಲೆಯ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಪರಿಣಾಮಕಾರಿ ಬೋಧನೆಗೆ ಆದ್ಯತೆ ನೀಡಬೇಕು. ಕ್ರೀಡಾ ಸೌಲಭ್ಯ, ಸಮುದಾಯ ರೇಡಿಯೋ ಕೇಂದ್ರಗಳು, ತ್ಯಾಜ್ಯ ವಿಲೇವಾರಿಯಲ್ಲಿ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು. ಮೀನುಗಾರಿಕೆ ಕಾಲೇಜ್ ಮತ್ತು ಬೃಹತ್ ಮೀನುಗಾರಿಕೆ ಸಂಗ್ರಹಾಲಯ, ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಈ ಹಿಂದೆ 1391 ಚೆಕ್‍ಡ್ಯಾಂ ಕಾಮಗಾರಿ, 236 ಸಿಡಿಗಳನ್ನು ನಿರ್ಮಾಣ ಮಾಡಲಾಗಿದೆ. 2023-24ನೇ ಸಾಲಿನ ಮಾನವ ದಿನಗಳಿಗೆ ಎದುರಾಗಿ ಕೂಲಿ ಮತ್ತು ಸಾಮಗ್ರಿ ಅನುಪಾತ 60:40ರ ಮಿತಿಯಲ್ಲಿ 54 ಚೆಕ್ ಡ್ಯಾಂ ಕಾಮಗಾರಿಗಳನ್ನು 76 ಸಿಡಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸಭೆಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಮುದ್ದೇಬಿಹಾಳ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿನ್ಸೆಂಟ್ ಡಿ ಸೋಜ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.