ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ. ಸರ್ಕಾರ ಒದಗಿಸುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಮತ್ತು ಪೌಷ್ಟಿಕ ಆಹಾರ ಒದಗಿಸುವ ಮತ್ತು ವಸತಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ವಸತಿ ನಿಲಯ ಮೇಲ್ವಿಚಾರಕರಿಗೆ, ಅಡುಗೆ ಸಹಾಯಕರಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ಸರಕಾರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ವಸತಿ ನಿಲಯದ ಮೇಲ್ವಿಚಾರಕರದ್ದಾಗಿದೆ. ಶುಚಿತ್ವಕ್ಕೆ ಮೊದಲು ಆದ್ಯತೆ ನೀಡಬೇಕು. ಪೌಷ್ಠಿಕಯುಕ್ತ ಗುಣಮಟ್ಟದ ಆಹಾರವನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಳ್ಳಲು, ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಬೋಧನೆಗೆ ಒತ್ತು ನೀಡಬೇಕು.ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಬೇಕು.  ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ, ಮೆನುವಿನಲ್ಲಿ ಇರುವ ಆಹಾರ ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂದು ಅವರು ಹೇಳಿದರು.

ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ಡಿಸಿ ಟಿ. ಭೂಬಾಲನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾನಾ ಇಲಾಖೆಗಳ ಅಧಿಕಾರಗಳು ಪಾಲ್ಗೊಂಡಿದ್ದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಿ

ಗಣರಾಜ್ಯೋತ್ಸವ ಆಚರಣೆಯ ದಿನದಿಂದ ವಿಜಯಪುರ ಹಾಗೂ ಇಂಡಿ ಉಪ ವಿಭಾಗದಿಂದ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು, ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತಿದ್ದು, ಈ ಜಾಗೃತಿ ಜಾಥಾದ ಮೂಲಕ ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯಲ್ಲಿ ಜಾಥಾ ಆಗಮಿಸಿದ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು (ವಾರ್ಡನ್) ವಸತಿ ನಿಲಯ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ವಸತಿ ನಿಲಯಗಳಲ್ಲಿ ಸ್ವಚ್ಚತೆ ಜೊತೆಗೆ ಶುಚಿತ್ವ ಕಾಪಾಡಿಕೊಳ್ಳಬೇಕು.ವಸತಿ ನಿಲಯದ ಮೇಲ್ವಿಚಾರಕರು ವಿದ್ಯಾರ್ಥಿಯ ವೈಯಕ್ತಿಕ ಏಳ್ಗೆಗೆ ಸಹಕಾರಿಯಾಗಲೂ ಸ್ನೇಹಮಯ ವಾತಾವರಣ ಕಾಪಾಡಿಕೊಂಡು ಪರಿಣಾಮಕಾರಿ ಕಲಿಕೆಗೆ ಪ್ರೇರೇಪಿಸಬೇಕು.ವಸತಿ ನಿಲಯದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೋಳ್ಳಬೇಕು. ಶುದ್ಧ ಕುಡಿಯುವ ನೀರು,ಅಗತ್ಯ ಮೂಲ ಸೌಲಭ್ಯ ದಿನನಿತ್ಯ ಖಚಿತಪಡಿಸಿಕೊಂಡು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಯೋಗಕ್ಷೇಮದ ಕುರಿತು ವಿಚಾರಿಸಬೇಕು. ನಿಯಮಿತವಾಗಿ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು.ಯಾವುದೇ ಸಮಸ್ಯೆಗಳಿಗೆ ಮೇಲಾಧಿಕಾರಿಗಳಿಗೆ ವರದಿ ಮಾಡಬೇಕು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉನ್ನತಿಗೆ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌