ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ  ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಂಣದಲ್ಲಿ ನಡೆದ  ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ  ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಅಪಘಾತ ತಡೆಗೆ ಸಂಬಂಧಿಸಿದ ಇಲಾಖೆಗಳು ಪೂರ್ವ ಸಿದ್ಧತಾ ಕ್ರಮ ತೆಗೆದುಕೊಂಡು ಅಪಘಾತ ತಡೆಗೆ ಕ್ರಮವಹಿಸಬೇಕು ಎಂದು ಹೇಳಿದರು.
ವಿಜಯಪುರದಲ್ಲಿ ಡಿಸಿ ಟಿ. ಭೂಬಾಲನ್ ಅವರು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದರು
ಅಪಘಾತಗಳು ತಡೆ ನಿಟ್ಟಿನಲ್ಲಿ ಪೂರ್ವ ಯೋಜನೆ ರೂಪುರೇಷೆ ಸಿದ್ಧಪಡಿಸಿಕೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ದಿಸೆಯಲ್ಲಿ ಕಾರ್ಯ ನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ  ಆಂಬುಲೆನ್ಸ್ ಮತ್ತು ವೈದ್ಯಕೀಯ ಸೇವೆ ಒದಗಿಸಬೇಕು. ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ನಿಮಯಗಳ ಬಗ್ಗೆ ತಿಳಿಸಬೇಕು. ಸಾರಿಗೆ ನಿಮಯಗಳ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳು ನಿಗಾ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣ ಸಂಪರ್ಕಿಸುವ ಕಡೆ ಅಗತ್ಯ ಮಾಹಿತಿ ಫಲಕ ಅಳವಡಿಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಅಪಾಯದ ಸೂಚನೆಯ ಮಾಹಿತಿ ಫಲಕ ಅಳವಡಿಸಬೇಕು. ಸಾರಿಗೆ ಇಲಾಖೆ,ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ, ಅಪಘಾತ ತಡೆಗಟ್ಟುವ ವಿಧಾನಗಳನ್ನು  ಅನುಸರಿಸಿ, ವೇಗದ ಮಿತಿ, ರಸ್ತೆ ತಿರುವು, ಅಡ್ಡರಸ್ತೆ ಹಾಗೂ ಮುನ್ನೆಚರಿಕೆಗಳ ಬಗ್ಗೆ ನಾಮಫಲಕಗಳನ್ನು ಕಾಣುವಂತೆ ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು.
ಅಫಘಾತ ಅಥವಾ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಹತ್ತಿರದ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಲು ಬಳಸಬೇಕಾದ ಸಹಾಯವಾಣಿ ಸಂಖ್ಯೆಗಳನ್ನು ಹೆದ್ದಾರಿ ಮಾಹಿತಿ ಫಲಕಗಳಲ್ಲಿ ನಮೂದಿಸಬೇಕು. ತುರ್ತು ಸೇವೆಗಳಿಗೆ ಆಂಬ್ಯುಲೆನ್ಸಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ವೇಗವಾಗಿ ವಾಹನ ಚಲಾಯಿಸುವುವವರ ಮೇಲೆ ನಿಗಾ ವಹಿಸಬೇಕು. ಯಾವುದೇ ರೀತಿಯಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗೃತ ಕ್ರಮ ಕೈಕೊಳ್ಳಬೇಕು ಎಂದರು. ನಗರದಲ್ಲಿ ಉಂಟಾಗುವ ಸಂಚಾರ  ದಟ್ಟಣೆಯನ್ನು ತಡೆಯಲು ಅವಶ್ಯಕತೆ ಇದ್ದಲ್ಲಿ ರಸ್ತೆ ಸಿಗ್ನಲ್ ದೀಪಗಳನ್ನು ಅಳವಡಿಕೆ ಮಾಡಬೇಕು. ಮುಖ್ಯ ರಸ್ತೆಯಲ್ಲಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಆಗಮನ ಹಾಗೂ ನಿರ್ಗಮನ ಸಮಯದಲ್ಲಿ ಸಂಚಾರ ನಿಯಮಗಳ ಪಾಲನೆಗೆ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ,  ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಸಮನ್ವಯದಿಂದ ಅಪಘಾತಗಳನ್ನು ತಡೆಗಟ್ಟುವಲ್ಲಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ತನಹಳ್ಳಿ, ಲೊಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರಾದ ರಾಜು ಮುಜುಮದಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌