ದ್ವಿತೀಯ ಪಿಯು ಪರೀಕ್ಷೆ: ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲಾದ್ಯಂತ ಮಾರ್ಚ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 59 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.  ಒಟ್ಟು 31,921 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಪರೀಕ್ಷೆ ನಡೆಯುವ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ರವಾನಿಸಲು 22 ರೂಟ್‌ಗಳನ್ನು ಮಾಡಲಾಗಿದೆ.  ತಹಸೀಲ್ದಾರರು, ಉಪತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರನ್ನೊಳಗೊಂಡ ತ್ರಿ-ಸದಸ್ಯ ಸಮಿತಿ ರಚಿಸಿಲಾಗಿದೆ.  ಈ ಸಮಿತಿ ಸದಸ್ಯರು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕುರಿತು ಮುಂಚಿತವಾಗಿ ಪರಿಶೀಲನೆ ಮಾಡಬೇಕು.  ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಜಯಪುರ ಡಿಸಿ ಕಚೇರಿ ಸಭಾಂಗಣದಲ್ಲಿ ಎಡಿಸಿ ಮಹಾದೇವ ಮುರಗಿ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು

ಪರೀಕ್ಷೆಗಳು ಅತೀ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ತಲುಪಿಸಬೇಕು.  ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ನಿಗದಿತ ಮಾರ್ಗದಲ್ಲಿ ಚಲಿಸಿ, ನಿಖರ ಸಮಯಕ್ಕೆ ತಲುಪಿಸಬೇಕು.  ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಪರೀಕ್ಷೆಯ ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಿರಬೇಕು.  ಪರೀಕ್ಷೆ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವವರು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು ಎಂದು ಅವರು ಸೂಚನೆ ನೀಡಿದರು.

ಎಲ್ಲ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕೊಠಡಿ ಮೇಲ್ವಿಚಾರಕರು ಅತ್ಯಂತ ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಅತ್ಯಂತ ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಕೆ. ಹೊಸಮನಿ, ಪ್ರಾಂಶುಪಾಲ ಕೆ. ಎ. ಉಪ್ಪಾರ, ಜಿಲ್ಲೆಯ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಪ್ರಶ್ನೆ ಪತ್ರಿಕೆ ವಿತರಣೆ ತಂಡದ ಪ್ರಾಚಾರ್ಯರು, ಉಪನ್ಯಾಸಕರು, ಪರೀಕ್ಷಾ ಉಪ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌