ಮಕ್ಕಳ ಸೂಪ್ತ ಪ್ರತಿಭೆಗೆ ನೀರೆರೆದು ಪ್ರೋತ್ಸಾಹಿಸಿ: ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಹೊಂದಲು ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ನಿಯಮಿತವಾಗಿ ಪಾಲ್ಗೊಳ್ಳುತ್ತಿರುವುದನ್ನು ಖಚಿತಪಡಿಸಿಕೊಂಡು ಮಗುವಿನಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಕಾರ್ಯ ಚಟುವಟಿಕೆ ರೂಪಿಸಬೇಕು. ಮಕ್ಕಳು ಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆಯೂ, ಆ ಮೂಲಕ ಅವರ ಭಾಗವಹಿಸುವಿಕೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರೇರೇಪಿಸಿಬೇಕು. ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರೋತ್ಸಾಹ ಒದಗಿಸಬೇಕು. ಮಕ್ಕಳಿಗೆ ಸಾಂಸ್ಕೃತಿಕ-ಪಾರಂಪರಿಕ ಕಲೆಗಳ ಬಗ್ಗೆ ಪರಿಚಯ ಮಾಡಿಸಿಕೊಡುವುದು ಅವಶ್ಯಕವಾಗಿದೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ-2024ರ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ ಉದ್ಘಾಟಿಸಿ ಮಾತನಾಡಿದರು.

 

ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಕ್ಕಳ ಹಬ್ಬದ ಸಂಭ್ರಮದ ಹಬ್ಬವಾಗಿದೆ.  ನಮ್ಮ ನಾಡಿನ ಕಲೆ, ಸಾಹಿತ್ಯ,ಸಂಸ್ಕೃತಿ ಹಾಗೂ ಐತಿಹಾಸಿಕ ಪರಂಪರೆ ತಿಳಿಸಬೇಕು. ಕಲೆ, ಸಾಹಿತ್ಯ ಅಭಿರುಚಿಯ ಕುರಿತ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು. ಮಕ್ಕಳಲ್ಲಿ ಜ್ಞಾನದ ಜೊತೆಗೆ ಸಾಮಾನ್ಯ ಜ್ಞಾನ, ನೈತಿಕತೆ, ಉತ್ತಮ ಜ್ಞಾನ ಮತ್ತು ಉತ್ತಮ ವಿಧ್ಯಾಭ್ಯಾಸ, ಉತ್ತಮ ಜೀವನಕ್ಕೆ ಸಹಾಯಕವಾಗಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನಾನಾ ಶಾಲೆಗಳ ವಿದ್ಯಾರ್ಥಿಗಳಿಂದ ಚಿತ್ರಕಲೆ, ಕಥೆ, ಕಾವ್ಯ, ಸಂಗೀತ, ಜಾನಪದ ನೃತ್ಯ, ನಾಟಕ ಪ್ರದರ್ಶನ, ಏಕಪಾತ್ರಾಭಿನಯ, ಡೊಳ್ಳುಕುಣಿತ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.ವಿಜೇತರಿಗೆ ಅಭಿನಂದನಾ ಪ್ರಮಾಣ ಪತ್ರ, ನೆನಪಿನ ಕಾಣಿಕೆ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಸರ್ಕಾರಿ ಬಾಲಕರ ಬಾಲಮಂದಿರದ ಹಿರಿಯ ಹಾಗೂ ಕಿರಿಯ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಿದ್ಧಪಡಿಸಿದ್ದ ನಾನಾ ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾಮನಕೇರಿಯ ಕೆವಿಜಿಬಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಡೊಳ್ಳು ಕುಣಿತ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಈ  ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌