ವಿಜಯಪುರ: ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ಆಯೋಗದ ನಿಯಮಾನುಸಾರ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಚೆಕ್‌ಪೋಸ್ಟಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. 24*7 ಸಿಸಿ ಕ್ಯಾಮಾರಗಳು ಕಾರ್ಯ ನಿರ್ವಹಿಸುತ್ತಿರಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಕ್ರಮ ಹಣ ಸಾಗಾಟ ಮತ್ತು ಉಚಿತ ಉಡುಗರೆ (ಫ್ರೀಬೀಸ್) ನಡೆಯುತ್ತಿರುವ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಬೇಕು. ಹಾಗೂ ಚೆಕ್‌ಪೋಸ್ಟ್ ಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಚುನಾವಣೆ ನೀತಿ ಸಂಹಿತೆಯನ್ನು ಮೀರಿದ ದೂರುಗಳು ಸಿ-ವಿಜಿಲ್ ಆ್ಯಪ್‌ನಲ್ಲಿ ದಾಖಲಾದರೆ 100 ನಿಮಿಷದ ಒಳಗಡೆ ಅದನು ಪರಿಹರಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದರು.
ಚುಣಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯೊಂದಿಗೆ ಕ್ರೀಯಾತ್ಮಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು. ಯಾವುದೇ ಕಾರಣಕ್ಕು ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಭೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ 1 ನೇ ಹಂತದ ತರಬೇತಿ ನೀಡುವ, ಅಂಚೆ ಮತಪತ್ರಗಳ ಕಾರ್ಯಗಳ ಬಗ್ಗೆ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ತಂಡಗಳಿಗೆ ವಾಹನ ಹಂಚಿಕೆ ಕುರಿತು, ಚುನಾವಣಾ ಟೆಂಡರ್ ಹಾಗೂ ಚುನಾವಣಾ ವೀಕ್ಷಕರಿಗೆ ಸೌಲಭ್ಯ ಕಲ್ಪಿಸಿದ ಬಗ್ಗೆ, ಚುನಾವಣೆಗೆ ಸಂಬಂದಿಸಿದ ವಿವಿಧ ದೂರಗಳ ವಿಲೇವಾರಿ ಕುರಿತು ಚರ್ಚಿಸಲಾಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.