ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ(ಡಿಡಿಪಿಐ) ಉಪನಿರ್ದೇಶಕ ಎನ್. ಎಚ್. ನಾಗೂರ ಅವರನ್ನು ಸೇವೆಯಿಂದ ಅಮಾನತು ಮಾಡಾಲಾಗಿದೆ.
ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಶಿಫಾರಸ್ಸಿನ ಮೇಲೆ ಅಮಾನತು ಮಾಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಮಲ್ಲಕಾರ್ಜುನ ರಾಮಚಂದ್ರಪ್ಪ ಆದೇಶದಲ್ಲಿ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಸಂದರ್ಭದಲ್ಲಿ ಸಿಸಿ ಕೆಮೆರಾ ದೃಷ್ಯಾವಳಿ ಪರಿಶೀಲನೆ ಮಾಡಿಲ್ಲ. ಕೆಲವು ಪರೀಕ್ಷೆ ಕೇಂದ್ರಗಳಲ್ಲಿ ಜನ ಜಂಗುಳಿ ನಿಯಂತ್ರಿಸಿಲ್ಲ. ಕೆಲವು ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳನ್ನು ತಪಾಸನೆ ಮಾಡದೇ ಪರೀಕ್ಷೆ ಕೇಂದ್ರದೊಳಗೆ ಬಿಡಲಾಗಿದೆ. ಪರೀಕ್ಷೆ ಕೇಂದ್ರದ ಶಾಲಾ ಶಿಕ್ಷಕರನ್ನೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನಾಗಿ, ಸ್ಥಾನಿಕ ಜಾಗೃತ ದಳ ಆಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದ್ದು, ಈ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.