ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೈರ್ಯದಿಂದ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯ. ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ‘
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಂಗ್ಲಿಷ್, ಕನ್ನಡ ಹಾಗೂ ಉರ್ದು ಮಾಧ್ಯಮಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಗರಿಷ್ಟ ಪ್ರಮಾಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಉಪಕ್ರಮಗಳನ್ನು ಅಳವಡಿಸಿಕೊಂಡಿರೆ ಪ್ರತಿಯೊಂದು ಕ್ಷೇತ್ರದಲ್ಲಿ ದಕ್ಷತೆ ಮತ್ತು ನಿಖರತೆಯ ಪ್ರಮಾಣ ಹೆಚ್ಚಾಗಿರುತ್ತದೆ. ಆರೋಗ್ಯಕರ ಸಾಮಾಜಿಕ ವ್ಯವಸ್ಥೆಯನ್ನು ಮತ್ತು ಸುಸ್ಥಿರ ಸಾರ್ವಜನಿಕ ವ್ಯವಸ್ಥೆಯನ್ನು ಬಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಾತ್ರ ಮಾನವ ಸಂಪನ್ಮೂಲವನ್ನು ನಿರ್ಧರಿಸುವ ಕಾರಣ ಇಂದಿನ ವಿದ್ಯಾರ್ಥಿಗಳು ನಿರಂತರವಾಗಿ ಓದು, ಅಧ್ಯಯನ ಇತ್ಯಾದಿ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಹಲವಾರು ಪರಿಣಾಮಕಾರಿ ಯೋಜನೆಗಳ ಫಲಶ್ರುತಿಯಾಗಿ ಇಂದು ಜಿಲ್ಲೆಯ ಹಲವಾರು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಮೂಲಕ ಜಿಲ್ಲೆಗೆ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ವಿಶೇಷ ಗೌರವ ತಂದುಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸತತ ಪರಿಶ್ರಮ, ಶಿಕ್ಷಕರ ಕಾರ್ಯತತ್ಪರತೆ ಮತ್ತು ಇಲಾಖಾ ಅಧಿಕಾರಿಗಳ ಸಮಯೋಚಿತ ಮಾರ್ಗದರ್ಶನ ಮತ್ತು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವ್ಯವಸ್ಥೆಯ ನೈತಿಕ ಬೆಂಬಲ ಮತ್ತು ಪ್ರೋತ್ಸಾಹದಿಂದಾಗಿ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿ, ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಈ ಸಾಧನೆಗಾಗಿ ಅಭಿನಂದನೆ ಪಾತ್ರರಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೂಡ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಇನ್ನಷ್ಟು ಉತ್ತಮ ಸಾಧನೆಗೆ ಪ್ರೊತ್ಸಾಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ, ಶಿಕ್ಷಣಾಧಿಕಾರಿ ಡಾ.ಅಶೋಕ ಮ. ಲಿಮಕರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಸವರಾಜ ತಳವಾರ, ಪ್ರಮೋದಿನಿ ಬಳೋಲಮಟ್ಟಿ, ಬಸವರಾಜ ಎಸ್. ಸಾವಳಗಿ ಮತ್ತು ಎಲ್ಲ ಸಾಧನೆ ಮಾಡಿರುವ 11 ವಿದ್ಯಾರ್ಥಿಗಳು ಓದಿರುವ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಪಾಲಕರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.