ಸರಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ- ನಿಗಮದ ಅಧ್ಯಕ್ಷ ಜಯದೇವ ನಾಯಕ ಸೂಚನೆ

ವಿಜಯಪುರ: ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು.  ಅಧಿಕಾರಿಗಳು ಕಾಲಕಾಲಕ್ಕೆ ತಾಂಡಾಗಳಿಗೆ ಭೇಟಿ ನೀಡಿ, ಗಂಭೀರವಾದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾಥಮಿಕ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಇಲಾಖೆ ಪಾತ್ರ ಅತಿ ಮುಖ್ಯವಾಗಿರುವುದರಿಂದ ತಾಂಡಾಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಂಡು ಶಿಕ್ಷಕರ ನಿಯೋಜನೆಗೆ ಕ್ರಮ ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ವಹಿಸಬೇಕು. ಕನ್ನಡ, ಇಂಗ್ಲಿಷ್ ಭಾಷೆಗಳ ವ್ಯಾಕರಣ ಕಲಿಯುವಿಕೆ ತರಬೇತಿಗಳನ್ನು ಹಮ್ಮಿಕೊಳ್ಳಬೇಕು ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಮುಖ್ಯ ವಿಷಯಗಳಲ್ಲಿ ಮಕ್ಕಳಿಗೆ ಕರಗತಗೊಳಿಸುವ ಮೂಲಕ ಅವರನ್ನು ಉತ್ತೇಜಿಸಬೇಕು ಎಂದು ಅವರು ಸೂಚನೆ ನೀಡಿದರು.

ವಿಜಯಪುರದಲ್ಲಿ ನಡೆದ ಸಭೆಯಲ್ಲಿ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಮಾತನಾಡಿದರು.

ಈ ಸಭೆಯಲ್ಲಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಅಶೋಕ ಲಿಮಕರ ಅವರು ಸಭೆಗೆ ಮಾಹಿತಿ ನೀಡಿ, ಈಗಾಗಲೇ ಜಿಲ್ಲೆಯಲ್ಲಿ ಮಿಷನ್ ವಿದ್ಯಾಪುರ ಯೋಜನೆ ಅನುಷ್ಠಾನಗೊಳಿಸಿ, ಆನ್‍ಲೈನ್ ಮೂಲಕ ಸಂಜೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಮುಖ ವಿಷಯಗಳ ಕುರಿತು ಪಾಠ ಬೋಧನೆ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಥಮಾದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಗುಣಮಟ್ಟದ ಆಹಾರ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿರುವ ಕುರಿತು ಖಚಿತಪಡಿಸಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಸಮಯಕ್ಕನುಗುಣವಾಗಿ ಸಾರಿಗೆ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕು. ತಾಂಡಾಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಅಧಿಕಾರಿ, ಸಿಬ್ಬಂದಿಗಳು ಇ-ಸ್ವತ್ತು ನೋಂದಣಿ ಮಾಡಲು ತಾಂಡಗಳಿಗೆ ತೆರಳಬೇಕು. ಸರ್ಕಾರ ನಿಗಧಿಪಡಿಸಿದ ಶುಲ್ಕದಲ್ಲಿ ಇ-ಸ್ವತ್ತು ನೊಂದಣಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಸಮರ್ಪಕವಾಗಿ ವಿದ್ಯುತ್ ಸಂಪರ್ಕ, ನಿರಂತರ ಜ್ಯೋತಿ ವಿದ್ಯುತ್ ಪೂರೈಸುವಂತೆ ಸೂಚಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಹೆಸ್ಕಾಂ ಅಧಿಕಾರಿ ಈಗಾಗಲೇ ಅರ್ಹ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ ಫಲಾನುಭವಿಗಳಿಗೆ ಯೋಜನೆ ಒದಗಿಸಲು ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.
ತಾಂಡಾಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ, ರಸ್ತೆ, ಬಸ್ ಸೌಕರ್ಯ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ದೊರಕಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸರಕಾರ ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಯಾವುದೇ ಕಾರಣಕ್ಕೂ ಸರಕಾರದ ಯೋಜನೆಗಳ ಸೌಲಭ್ಯಗಳಿಂದ ಅರ್ಹರು ವಂಚಿತರಾಗದಂತೆ ನೋಡಿಕೊಂಡು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಸರ್ಕಾರದ ಸೌಲತ್ತುಗಳನ್ನು ಜನರಿಗೆ ದೊರಕಿಸಿ ಅನುಕೂಲ ಕಲ್ಪಿಸಬೇಕು. ಜಿಲ್ಲೆಯಲ್ಲಿನ ತಾಂಡಾಗಳಿಗೆ ಲಿಂಕ್ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ, ಸಾರಿಗೆ ಸೌಕರ್ಯ, ಶಿಕ್ಷಕರ ಕೊರತೆ, ಶಿಕ್ಷಣ ಗುಣಮಟ್ಟಕ್ಕೆ ಒತ್ತು, ಬೀದಿ ದೀಪ ನಿರ್ವಹಣೆ, ವಿದ್ಯುತ್ ಸಂಪರ್ಕ, ಅಂಗನವಾಡಿಗಳ ಕಾರ್ಯನಿರ್ವಹಣೆ, ನಿರಂತರ ಜ್ಯೋತಿ ಸಂಪರ್ಕ, ಗಂಗಾ ಕಲ್ಯಾಣ ಬೊರವೆಲ್‍ಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿಶೇಷ ಗಮನ ಹರಿಸಿ ತಾಂಡಾಗಳ ಅಭಿವೃದ್ದಿಗಾಗಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ತಾಂಡಾಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿರುವ ತಾಂಡಾಗಳ ಮಾಹಿತಿ, ಹಾಗೂ ತಾಂಡಾ ಅಭಿವೃದ್ದಿಗಾಗಿ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಿಕೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಭೆಗೆ ಕಂದಾಯ ಗ್ರಾಮಗಳಿಗೆ ಸೇರಿದ ತಾಂಡಾಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಹೆಸ್ಕಾಂನ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಕೆಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌