ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜು. 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‍ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ. ಕಕ್ಷಿದಾರರು ಈ ಅದಾಲತ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳೀದ್ದಾರೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ,ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜು. 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿಗೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು,ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,ವೈವಾಹಿಕ ಪ್ರಕರಣಗಳು,ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ (ರೇರಾ) ಪ್ರಕರಣಗಳು,ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು,ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು(ಡಿ.ಆರ್.ಟಿ) ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು,ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಕಕ್ಷಿಗಾರರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಪ್ರಕರಣ ಮತ್ತು ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸಲಾಗುವುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯ ನಾನಾ ನ್ಯಾಯಾಲಯಗಳಲ್ಲಿ 01.07.2024ವರೆಗೆ ಒಟ್ಟು 66,736 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಇವುಗಳಲ್ಲಿ ಈಗಾಗಲೇ 16,393 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಬಂಧಿಸಿದ ವಕೀಲರ ಹಾಗೂ ಕಕ್ಷಿದಾರರೊಂದಿಗೆ ಚರ್ಚಿಸಿ ರಾಜಿಗಾಗಿ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜು. 13 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿವಾಜಿ ಅನಂತ ನಲವಡೆ ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಅಪೌಷ್ಠಿಕ ನಿವಾರಣಾ ರಾಜ್ಯ ಸಲಹಾ ಸಮಿತಿಯಿಂದ ಉಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾದ ಪ್ರಾಧಿಕಾರಕ್ಕೆ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಒದಗಿಸಿರುವ ಮೂಲಭೂತ ಸೌಲಭ್ಯ ಅವುಗಳ ಸ್ಥಿತಿ ಗತಿ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಜು. 29 ರಿಂದ ರಿಂದ ಆ. 3ರ ವರೆಗೆ ವಿಶೇಷ ಲೋಕ ಅದಾಲತ್
ಸರ್ವೋಚ್ಛ ನ್ಯಾಯಾಲಯದ 75ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಜು. 29 ರಿಂದ ಆ. 3ರ ವರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಲೋಕ ಅದಾಲತ್ ಕಾಯಕ್ರಮ ಆಯೋಜಿಸಲಾಗಿದೆ.
ಸರ್ವೋಚ್ಛ ನ್ಯಾಯಾಲಯದಲ್ಲಿ ಜಿಲ್ಲೆಯ 26 ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಸದರಿ ಪ್ರಕರಣಗಳನ್ನು ಪ್ರತಿ ದಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಪೂರ್ವ ಸಂಧಾನ ಮಾಡಲಾಗುತ್ತಿದ್ದು, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿರುವ ಪಕ್ಷಗಾರರು ಖುದ್ದಾಗಿ ಅಥವಾ ವಕೀಲರೊಂದಿಗೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪೂರ್ವ ಸಂಧಾನ ಮಾಡಿಕೊಳ್ಳುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ, 4ನೇ ಹೆಚ್ಚುವರಿ ಹಿರಿಯ ಸಿವಿಲ್ ಜೆಎಂಎಫ್ ಸಿ ನ್ಯಾಯಾಧೀಶ ಮಹೇಶ ಚಂದ್ರಕಾಂತ ಅವರು ಉಪಸ್ಥಿತರಿದ್ದರು.