ಬೆಳೆಗಳ ವಿವರ ಮೊಬೈಲ್ ಆಪ್‍ನಲ್ಲಿ ದಾಖಲಿಸಿ- ರೈತರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ

ವಿಜಯಪುರ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ.

ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‍ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ.
ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು 31.08.2024ರ ವರೆಗೆ ಅವಕಾಶ ಕಲ್ಪಿಸಲಾಗಿದೆ.  ಒಂದು ವೇಳೆ ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ತಾವೇ ಕೈಗೊಳ್ಳಲು ಸಾಧ್ಯವಾಗದಿದ್ದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ನಾನಾ ಬೆಳೆಗಳ ಮಾಹಿತಿಯನ್ನು ಖಾಸಗಿ ನಿವಾಸಿಗಳ ಮೂಲಕ ಖುದ್ದಾಗಿ ಕ್ಷೇತ್ರದಲ್ಲಿದ್ದು, 15.08.-2024 ರಿಂದ 30.09.2024 ರೊಳಗಾಗಿ ನಿಖರವಾಗಿ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಬೆಳೆ ಸಮೀಕ್ಷೆ ಆಪ್‍ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಉಪಯೋಗಿಸಲಾಗುವುದು. ಈ ನಿಟ್ಟಿನಲ್ಲಿ ಸ್ವತ: ರೈತರೇ ತಮ್ಮ ಮೊಬೈಲ್ ಆಪ್ ಮೂಲಕ ಸಕಾಲಿಕವಾಗಿ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪಲೊಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಿ, ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಬಹುದಾಗಿದ್ದು, ಜಿಲ್ಲೆಯ ರೈತರು ಈ ಯೋಜನೆ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ನಿಗದಿತ ಸಮಯದೊಳಗೆ ದಾಖಲಿಸಬೇಕು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮಕ್ಕೆ ನಿಯೋಜಿಸಲಾದ ಖಾಸಗಿ ನಿವಾಸಿ(ಪಿಆರ್)ಗಳನ್ನು ಅಥವಾ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಟಿ. ಭೂಬಾಲನ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌